ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ 64 ಪ್ರಕರಣ: 34 ವಿಚಾರಣೆಗೆ ಬಾಕಿ- ಉಡುಪಿ ಡಿಸಿ
ಉಡುಪಿ, ಜು.19: ನಗರದ ನಿಟ್ಟೂರಿನಲ್ಲಿರುವ ನೊಂದ ಮಹಿಳೆಯರಿಗೆ ಒಂದೇ ಸೂರಿನಡಿ ವಿವಿಧ ಸೌಲಭ್ಯ ಕಲ್ಪಿಸುವ ‘ಸಖಿ ಒನ್ ಸ್ಟಾಪ್ ಸೆಂಟರ್’ನಲ್ಲಿ ಈ ವರ್ಷದಎಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 64 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 30 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದಿರುವ 34 ಪ್ರಕರಣಗಳನ್ನು ಅತ್ಯಂತ ಶೀಘ್ರವಾಗಿ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ಕಾನೂನು ಸಲಹೆಗಾರರ ನೆರವಿನೊಂದಿಗೆ ಬಗೆಹರಿಸಲು ಪ್ರಯತ್ನಿಸಬೇಕು ಎಂದವರು ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆ ಪ್ರಕರಣ ಗಳು ನಡೆಯದಂತೆ ಅಗತ್ಯವಿರುವ ಎಲ್ಲಾ ರೀತಿಯ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳ ಬೇಕು. ಸಾರ್ವಜನಿಕರಿಂದ ಈ ಬಗ್ಗೆ ಸಣ್ಣ ಮಾಹಿತಿ ಬಂದರೂ ಅದರ ಬಗ್ಗೆ ನಿರ್ಲಕ್ಷ್ಯವಹಿಸದೇ ಸೂಕ್ಷ್ಮವಾಗಿ ತನಿಖೆ ಕೈಗೊಳ್ಳಬೇಕು. ಒಂದೊಮ್ಮೆ ಉಲ್ಲಂಘನೆ ಆಗಿರುವುದು ಖಚಿತವಾದ್ದಲ್ಲಿ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು.
ಮಾತೃವಂದನಾ ಯೋಜನೆ: ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಯಡಿ ಪ್ರಸಕ್ತ ಸಾಲಿನಲ್ಲಿ 5928 ವಾರ್ಷಿಕ ಗುರಿಯನ್ನು ಹೊಂದಲಾಗಿದ್ದು, ಈವರೆಗೆ 4333 ಗರ್ಭಿಣಿ ಸ್ತ್ರೀಯರು ಹಾಗೂ ಬಾಣಂತಿಯರನ್ನು ಫಲಾನುಭವಿಗಳನ್ನಾಗಿಸಿ ಈವರೆಗೆ ಮೊದಲ ಕಂತಿನಲ್ಲಿ 4314 ಫಲಾನುಭವಿ ಗಳಿಗೆ ಒಟ್ಟು 1,29,42,000ರೂ. ಹಣವನ್ನು ಪಾವತಿ ಮಾಡಲಾಗಿದೆ. 2ನೇ ಕಂತಿನಲ್ಲಿ 1,56,000 ರೂ. ಪಾವತಿಸಿದ್ದು, ಬಾಕಿ ಉಳಿದವರಿಗೆ ಶೀಘ್ರವಾಗಿ ವಿತರಿಸಲು ಕ್ರಮ ಕೈಗೊಳ್ಳ ಬೇಕು. ಸಣ್ಣ-ಪುಟ್ಟ ಕಾರಣಗಳಿಗಾಗಿ ಯಾರೊಬ್ಬರೂ ಈ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದವರು ತಿಳಿಸಿದರು.
ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಿ: ಮಹಿಳೆಯರ ಸುರಕ್ಷತೆ, ಭದ್ರತೆ ಹಾಗೂ ಸಬಲೀಕರಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಮಿಷನ್ ಶಕ್ತಿ ಯೋಜನೆಯನ್ನು ಹೆಚ್ಚು ಪರಿಣಾಮ ಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಮಹಿಳೆ ಯರು ಸ್ವಾವಲಂಬಿ ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಮುಂದಾಗ ಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆಗಳನ್ನು ನೀಡಿದರು.
ಸರಕಾರವು ಮಹಿಳೆಯರ ಹಾಗೂ ಮಕ್ಕಳ ಅಭಿವೃದ್ಧಿಗೆ ಅನೇಕ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳ ಬಗ್ಗೆ ಮಹಿಳೆಯರಿಗೆ ಅರಿವು ಮೂಡಿಸುವ ಜೊತೆಗೆ ಅದು ಯಶಸ್ವಿಯಾಗಿ ಅನುಷ್ಠಾನಗೊಳ್ಳುವಂತೆ ನೋಡಿ ಕೊಳ್ಳುವುದು ಅಧಿಕಾರಿಗಳ ಕರ್ತವ್ಯ. ಇದನ್ನು ಜವಾಬ್ದಾರಿಯುತ ವಾಗಿ ಮಾಡಬೇಕೆಂದು ತಿಳಿಸಿದರು.
ಸಮಾಜದಲ್ಲಿ ಲಿಂಗತಾರತಮ್ಯವನ್ನು ಹೋಗಲಾಡಿಸಿ. ಹೆಣ್ಣು ಮಕ್ಕಳ ರಕ್ಷಣೆ ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು. ಹೆಣ್ಣು ಮಕ್ಕಳಿಗೆ ವೈಯಕ್ತಿಕ ನೈರ್ಮಲ್ಯ ಹಾಗೂ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಯುವಜನರ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಬೇಕು ಎಂದರು.
ಮರಳಿ ಶಾಲೆಗೆ ಮಕ್ಕಳು: ಸಾಮಾಜಿಕ ಹಾಗೂ ಆರ್ಥಿಕ ಕಾರಣಗಳಿಂದ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಿಕೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದೊಂದಿಗೆ ನಡೆಯಬೇಕು. ಯಾವೊಬ್ಬ ಅರ್ಹ ಮಗುವೂ ಸಹ ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.
ಮಣಿಪಾಲದ ಉದ್ಯೋಗಸ್ಥ ಮಹಿಳೆಯರ ವಸತಿಗೃಹದ ನಿರ್ವಹಣೆಯನ್ನು ಉತ್ತಮವಾಗಿ ಮಾಡಬೇಕು. ಆಹಾರ ವಿತರಣೆಯಲ್ಲಿ ಸುಧಾರಣೆ ತರಬೇಕು. ಆಗಿಂದಾಗ್ಗೆ ವಸತಿಗೃಹದ ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿ, ಕುಂದುಕೊರತೆ ಗಳನ್ನು ಬಗೆಹರಿಸಬೇಕೆಂದರು.
ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕಡಿಮೆ ತೂಕ ಹಾಗೂ ತೀವ್ರ ಅಪೌಷ್ಠಿಕತೆ ಹೊಂದಿದ ಮಕ್ಕಳ ಪೌಷ್ಠಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರತೀ ತಿಂಗಳು ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮನ್ವಯ ದೊಂದಿಗೆ ಆಹಾರ ಉತ್ಪನ್ನಗಳನ್ನು ಮಕ್ಕಳಿಗೆ ನೀಡುವ ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಪ್ರತೀ ಹದಿನೈದು ದಿನಗಳಿಗೊಮ್ಮೆ ಅಂತಹವರ ಮನೆಗಳನ್ನು ಭೇಟಿ ಮಾಡಿ, ಸುಧಾರಣೆ ಆಗಿರುವ ಬಗ್ಗೆ ಪರಿಶೀಲಿಸಬೇಕು ಹಾಗೂ ಜಿಲ್ಲಾಡಳಿತಕ್ಕೆ ಈ ಬಗ್ಗೆ ವರದಿ ಸಹ ನೀಡಬೇಕು ಎಂದರು.
ಕಟಪಾಡಿಯಲ್ಲಿ ಉದ್ಯೋಗಸ್ಥ ಮಹಿಳೆಯರಿಗಾಗಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವಸತಿಗೃಹಕ್ಕೆ ಅಗತ್ಯವಿರುವ ಅನುದಾನವನ್ನು ಸರಕಾರ ಅಥವಾ ಇತರೆ ಸಿಆರ್‌ಎಸ್ ನಿಧಿಯ ಅನುದಾನ ಬಳಕೆ ಮಾಡಿ ಕೊಳ್ಳುವ ಮೂಲಕ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.
ಸಭೆಯಲ್ಲಿ ಎಎಸ್‌ಪಿ ಸಿದ್ದಲಿಂಗಪ್ಪ ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
26 ಕೌಟುಂಬಿಕ ಹಿಂಸೆ ಪ್ರಕರಣ ವಿಚಾರಣೆಗೆ ಬಾಕಿ
ಜಿಲ್ಲೆಯಲ್ಲಿ ಎಪ್ರಿಲ್‌ನಿಂದ ಜೂನ್‌ವರೆಗೆ ಒಟ್ಟು 26 ಕೌಟುಂಬಿಕ ಹಿಂಸೆ ಪ್ರಕರಣ ದಾಖಲಾಗಿದೆ. ಬಾಕಿ ಇದ್ದ ಹಳೆಯ 32 ಪ್ರಕರಣಗಳನ್ನು ಇತ್ಯರ್ಥ ಗೊಳಿಸಿದ್ದು, ಇನ್ನು 26 ಪ್ರಕರಣಗಳು ವಿಚಾರಣೆಗೆ ಬಾಕಿ ಉಳಿದಿವೆ. ಇವುಗಳಿಗೆ ಆದ್ಯತೆಯ ಮೇಲೆ ನಿಯಮಾನುಸಾರ ಆದಷ್ಟು ಜರೂರಾಗಿ ನ್ಯಾಯ ಒದಗಿಸಿ ಕೊಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಒಂದು ಪ್ರಕರಣ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಯಾವುದೇ ಪ್ರಕರಣ ನಡೆಯದಂತೆ ಇಲಾಖೆಯ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ರಚಿಸಿರುವ ಕಾವಲು ಸಮಿತಿ ಸಭೆಗಳನ್ನು ನಿಯುತವಾಗಿ ನಡೆಸಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು