ಅನಾಥ ಮಕ್ಕಳನ್ನು ದತ್ತು ಸ್ವೀಕರಿಸಿದ ಬೆಳಗಾವಿ, ದ.ಕ ಹಾಗೂ ಉ.ಕ ಜಿಲ್ಲೆಗಳ ದಂಪತಿಗಳು: ಆದೇಶ ಪ್ರತಿ ವಿತರಿಸಿದ ಡಿಸಿ

Oplus_131072

ಉಡುಪಿ: ಉಡುಪಿ‌ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅವರು ತಮ್ಮ ಕಚೇರಿಯಲ್ಲಿ ಸೋಮವಾರ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಅನಾಥ ಮಕ್ಕಳನ್ನು ರಾಜ್ಯದ ಬೆಳಗಾವಿ, ದಕ್ಷಿಣ ಕನ್ನಡ ಹಾಗೂ ಭಟ್ಕಳ ಜಿಲ್ಲೆಗಳ ಮೂಲದ ದಂಪತಿಗಳಿಗೆ ಮಕ್ಕಳನ್ನು ದತ್ತು ನೀಡುವ ಆದೇಶ ಪ್ರತಿಯನ್ನು ವಿತರಿಸಿದರು.

ಇದೇ ಸಂದರ್ಭದಲ್ಲಿ ಅವರು ಮಾತನಾಡುತ್ತಾ, ದತ್ತು ನೀಡುವುದರಿಂದ ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಎಂದರು.

ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ ತಿದ್ದುಪಡಿ ಕಾಯ್ದೆಯಡಿ ಕುಟುಂಬದ ಪ್ರೀತಿ ವಂಚಿತ ಪೋಷಕರನ್ನು ಕಳೆದುಕೊಂಡ ಪಾಲನೆ, ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳುಗಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದರು.

ದತ್ತು ಪಡೆಯಲು ಇಚ್ಚಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬೇಕು. ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹುದಾಗಿದೆ ಎಂದರು.

ಕಾನೂನು ಉಲ್ಲಂಘಿಸಿ ಅಥವಾ ಮಕ್ಕಳ ಮಾರಾಟ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 1 ಲಕ್ಷ ರೂಪಾಯಿ ದಂಡ ಹಾಗೂ 7 ವರ್ಷದ ವರೆಗೆ ಜೈಲು ಶಿಕ್ಷೆ ಹಾಗೂ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ಕೊಂಡುಕೊಂಡವರಿಗೆ 1 ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (ಸಾಂಸ್ಥಿಕ) ಮಹೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ) ಕಪಿಲಾ ಬಿ, ಲೀಗಲ್ ಕಂ ಪ್ರೋಭೆಷನರ್ ಆಫೀಸರ್ ಅಪೂರ್ವ, ಉಡುಪಿ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ಸಂಯೋಜಕಿ ಮೇರಿನಾ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ ಕಾರ್ಯನಿರ್ವಹಿಸುತ್ತಿದ್ದು, 2008 ರಿಂದ ಈವರೆಗೆ 108ಸ್ವದೇಶಿ ಹಾಗೂ 6 ವಿದೇಶಿ ಪೊಷಕರಿಗೆ ಮಕ್ಕಳನ್ನು ದತ್ತು ನೀಡಲಾಗಿದೆ. ಜಿಲ್ಲಾಧಿಕಾರಿಗಳಿಂದ 19 ಪೋಷಕರಿಗೆ ದತ್ತು ಆದೇಶ ನೀಡಲಾಗಿದೆ.

ದತ್ತು ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಗಾಗಿ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ, ಆಶೀರ್ವಾದ್ ರಸ್ತೆ, ಸಂತೆಕಟ್ಟೆ ಇಲ್ಲಿಗೆ ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!