ಸರ್ಕಾರ V/s ರಾಜಭವನ ಸಂಘರ್ಷ- ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ ಬೆನ್ನಲ್ಲೇ ಇದರ ವಿರುದ್ಧ ಸಿದ್ದರಾಮಯ್ಯ ಅವರು ಸೋಮವಾರ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವರ್ಸಸ್ ರಾಜಭವನದ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ರದ್ದುಪಡಿಸುವಂತೆ ರಿಟ್ ಅರ್ಜಿಯಲ್ಲಿ ಸಿದ್ದರಾಮಯ್ಯ ಅವರು ಹೈಕೋರ್ಟ್​​ಗೆ ಮನವಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.

ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೂಡ ಚಿಂತನೆ ನಡೆದಿತ್ತು. ಈ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಪಾಲರ ನಡೆ ಪ್ರತಿಧ್ವನಿಸುವಂತೆ ಮಾಡಿದರೆ, ರಾಜಕೀಯವಾಗಿ ಅನುಕೂಲವಾಗುತ್ತದೆಂಬ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿರುವ ಸಿಎಂ ಪರ ವಕೀಲರು, ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಕಾನೂನು ಬಾಹಿರ ಎಂದು ವಾದ ಮಂಡಿಸಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 17ಎ ಅಡಿ ಪ್ರಾಸಿಕ್ಯೂಷನ್ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ. ಅಲ್ಲದೇ, ಪ್ರಾಸಿಕ್ಯೂಷನ್‌ ನೀಡುವ ಬಗ್ಗೆ 2021ರ ಸೆಪ್ಟಂಬರ್‌ನಲ್ಲಿ ಕೇಂದ್ರ ಸರ್ಕಾರವೇ ಚೆಕ್‌ಲಿಸ್ಟ್ ನೀಡಿದೆ. ಆ ಚೆಕ್‌ಲಿಸ್ಟ್ ಕೂಡಾ ಪಾಲನೆಯಾಗಿಲ್ಲ. ಇನ್ನು ಡಿಜಿ-ಐಜಿಪಿ ಮಟ್ಟದ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಬೇಕು. ಅನುಮತಿ ಕೇಳಲು ತನಿಖಾ ವರದಿ ಇರಬೇಕು. ಆದರೆ ಇಲ್ಲಿ ತನಿಖಾ ವರದಿಯೂ ಇಲ್ಲ, ಅಧಿಕಾರಿಗಳೂ ಇಲ್ಲ. ಖಾಸಗಿ ವ್ಯಕ್ತಿಗಳ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ನೀಡಿದ್ದಾರೆ.

ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಇದರ ಜೊತೆಗೆ ಸುಪ್ರೀಂಕೋರ್ಟ್‌ ಈ ಹಿಂದೆ ತೀರ್ಪು ನೀಡಿದ್ದ ಬೇರೆ ಬೇರೆ 7 ಪ್ರಕರಣಗಳನ್ನ ಉಲ್ಲೇಖಿಸಿ, ಪ್ರಾಸಿಕ್ಯೂಷನ್‌ಗೆ ನೀಡುವ ನಿಯಮ ಇದಲ್ಲ ಎಂದು ಹೈಕೋರ್ಟ್‌ನಲ್ಲಿ ಕಾನೂನು ಯುದ್ಧ ನಡೆಸಲು ಸಿದ್ಧತೆ ನಡೆಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!