ಆಂಧ್ರ-ತೆಲಂಗಾಣದಲ್ಲಿ ವರುಣನ ಅಬ್ಬರ: ಜನಜೀವನ ಅಸ್ತವ್ಯಸ್ತ, 25 ಮಂದಿ ಸಾವು
ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಸತತ 2ನೇ ದಿನವೂ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯುಂಟಾಗಿದೆ.
ತೆಲಂಗಾಣದಲ್ಲಿ ಹೈದರಾಬಾದ್ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು, ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ರೈಲುಗಳನ್ನು ಭಾಗಶಃ ರದ್ದುಗೊಂಡಿದ್ದು, 99 ರೈಲುಗಳನ್ನು ರದ್ದುಗೊಂಡಿವೆ. ದಕ್ಷಿಣ ಮಧ್ಯ ರೈಲ್ವೆ ಜಾಲದ ಅನೇಕ ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಹಳಿಗಳ ಮೇಲೆ ನೀರು ನಿಂತಿದ್ದರಿಂದ 54 ರೈಲುಗಳ ಮಾರ್ಗ ಬದಲಿಸಲಾಗಿದೆ ಎಂದು ಎಸ್‌ಸಿಆರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ತಡೆ ಪಡೆಗಳು ಪ್ರವಾಹ ಪ್ರದೇಶಗಳಿಂದ ಸಾವಿರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ, ಶಿಬಿರಗಳಿಗೆ ಸ್ಥಳಾಂತರಿಸಿದ್ದಾರೆ,
ಈ ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣ ಸಿಎಂ ಎ ರೇವಂತ್ ರೆಡ್ಡಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಳೆ ಮತ್ತು ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ನಡುವೆ ಪ್ರವಾಹ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 26 ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡು ರಾಜ್ಯಗಳಲ್ಲಿ ಈಗಾಗಲೇ 12 ತಂಡಗಳನ್ನು ನಿಯೋಜಿಸಲಾಗಿದ್ದು, ಇನ್ನೂ 14 ತಂಡಗಳನ್ನು ಕಳುಹಿಸಲಾಗು ತ್ತಿದೆ ಎಂದು ತಿಳಿಸಿದ್ದಾರೆ. 14 ತಂಡಗಳ ಪೈಕಿ 8 ತಂಡಗಳನ್ನು ದೇಶದ ವಿವಿಧ ಸ್ಥಳಗಳಿಂದ ವಿಮಾನದಲ್ಲಿ ಕರೆತರಲಾಗುತ್ತಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಈ ವರೆಗೆ ಕನಿಷ್ಠ 25 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.