ಅರ್ಕಾವತಿ ಡಿನೋಟಿಫಿಕೇಶನ್: ಸಿಎಂ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ!
ಬೆಂಗಳೂರು: ಮುಡಾ ಪ್ರಕರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರದ ವಿರುದ್ಧ ಹೋರಾಟ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಇದೀಗ ಅರ್ಕತಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋಟ್ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿ ದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಎಸ್.ಕೆಂಪಣ್ಣ ಆಯೋಗದ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಪತ್ರ ಬರೆದಿದ್ದಾರೆ.
ಮೂಲಗಳ ಪ್ರಕಾರ, 2013–18ರ ಅವಧಿಯ ವಿವರಣೆಯನ್ನು ರಾಜ್ಯಪಾಲರು ಕೇಳಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಆಯೋಗದ ವರದಿಗೆ ಸಂಬಂಧಿಸಿದ ಕಡತವನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಗರಾಭಿವೃದ್ಧಿ ಇಲಾಖೆ ಇದೇ 11ರಂದು ಸಲ್ಲಿಸಿದೆ.
ಅರ್ಕಾವತಿ ಬಡಾವಣೆಗಾಗಿ ಸ್ವಾಧೀನ ಮಾಡಿದ್ದ ಭೂಮಿಯಲ್ಲಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸೂಚನೆಯಂತೆ 2014ರಲ್ಲಿ ಡಿನೋಟಿಫಿಕೇಷನ್ ಮಾಡಲಾಗಿತ್ತು. 472.25 ಎಕರೆ ಬದಲು ಹೆಚ್ಚುವರಿಯಾಗಿ 119 ಎಕರೆ ಸೇರಿಸಿ 541.25 ಎಕರೆ ಕೈ ಬಿಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯಾ. ಎಚ್.ಎಸ್. ಕೆಂಪಣ್ಣ ಆಯೋಗವನ್ನು 2015ರಲ್ಲಿ ಸಿದ್ದರಾಮಯ್ಯ ಸರ್ಕಾರ ರಚನೆ ಮಾಡಿತ್ತು. ಇತ್ತೀಚೆಗೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅರ್ಕಾವತಿ ಬಡಾವಣೆಯ ಡಿನೋಚಿಫಿಕೇಷನ್‌ನಲ್ಲಿ 8 ಸಾವಿರ ಕೋಟಿ ರೂ.ಗಳಷ್ಟು ಅಕ್ರಮವಾಗಿದೆ ಎಂಬ ಆರೋಪ ಮಾಡಿದ್ದರು.
ರಾಜ್ಯಪಾಲರಿಗೆ ಆಗಸ್ಟ್ 24ರಂದು ಪತ್ರ ಬರೆದಿದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ರವಿ, ಕೆಂಪಣ್ಣ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು.
‘ಕೆಂಪಣ್ಣ ಆಯೋಗವು 2017ರ ಆಗಸ್ಟ್‌ನಲ್ಲಿ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಜಮೀನುಗಳ ಡಿನೋಟಿಫಿಕೇಷನ್ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಾಗ, ಸಿದ್ದರಾಮಯ್ಯ ಅವರೇ ಈ ಆಯೋಗವನ್ನು ರಚಿಸಿದ್ದರು’ ಎಂದೂ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜಭವನದಿಂದ ಈ ಬಗ್ಗೆ ಮಾಹಿತಿ ಕೋರಲಾಗಿದೆ.
ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ವಿವರವಾದ ವರದಿ ಸಿದ್ಧಪಡಿಸಿದ್ದು ಅದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಗೆ ತಲುಪಿಸಿದ್ದಾರೆ. ಶಿವಕುಮಾರ್ ವರದಿಯನ್ನು ಪರಿಶೀಲನೆ ಮಾಡಿದ ನಂತರ ರಾಜಭವನಕ್ಕೆ ರವಾನಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಸಂತೋಷ್ ಲಾಡ್ ಅವರು ಗಂಗೇನಹಳ್ಳಿ ಡಿ ನೋಟಿಫಿಕೇಷನ್‌ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ ಬಳಿಕ ಈ ವಿದ್ಯಮಾನ ನಡೆದಿದೆ. ಆದರೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಸೆ.11 ರಂದೇ ಡಿಸಿಎಂ ಕಚೇರಿಗೆ ದಾಖಲೆ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಏನೆಲ್ಲ ತನಿಖೆ ಆಗಿತ್ತು?
ಅರ್ಕಾವತಿ ಬಡಾವಣೆಯ ಅಂತಿಮ ಅಧಿಸೂಚನೆಯಿಂದ ಹೊರಗಿಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) 2006, 2007, 2011 ಮತ್ತು 2013 ರಲ್ಲಿ ಅಂಗೀಕರಿಸಲಾದ ವಿವಿಧ ನಿರ್ಣಯಗಳು ಕಾನೂನುಬದ್ಧವಾಗಿವೆಯೇ? 2014ರ ಜೂನ್ 18ರಂದು ಗೆಜೆಟ್ ಹೊರಡಿಸಲಾದ ಅರ್ಕಾವತಿ ಬಡಾವಣೆಯ ಮರು-ಮಾರ್ಪಡಿಸಿದ ಯೋಜನೆಯು ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿದೆ ಯೇ ಎಂಬುದರ ತನಿಖೆಯನ್ನು ಮಾಡಲು ಆಯೋಗ ರಚನೆಯಾಗಿತ್ತು.