ವಿತ್ತ ಸಚಿವೆ ನಿರ್ಮಲಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ- ಇವರು ರಾಜೀನಾಮೆ ಕೊಡುತ್ತಾರೆಯೇ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಮೈಸೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ಚುನಾವಣಾ ಬಾಂಡ್ ಗೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧವೂ ಎಫ್.ಐ.ಆರ್ ದಾಖಿಲಿಸಿರುವುದಾಗಿ ತಿಳಿದು ಬಂದಿದೆ. ಅವರೂ ರಾಜೀನಾಮೆ ಕೊಡುತ್ತಾರೆಯೇ” ಎಂದು ಪ್ರಶ್ನಿಸಿದ್ದಾರೆ.
ನಗರದ ಜಿ.ಪಂ.ನಲ್ಲಿ ಶುಕ್ರವಾರ ಸುಧೀರ್ಘ 10 ಗಂಟೆಗಳ ಕಾಲ ಮೈಸೂರು ಜಿಲ್ಲಾಮಟ್ಟದ ಕೆ.ಡಿ.ಪಿ. ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ 17 ಎ ಪ್ರಕಾರ ಎಫ್‌ಐಆರ್ ದಾಖಲಾಗಿದೆ. ಆದರೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಮೇಲೂ ಚುನಾವಣಾ ಬಾಂಡ್ ಸಂಬಂಧ ಎಫ್‌ಐಆರ್ ದಾಖಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧವೂ ಎಫ್‌ಐಆರ್ ಆಗಿದೆ. ಅವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದರು.
ಬಿಜೆಪಿಯವರು ಸಿಎಂ ರಾಜೀನಾಮೆ ಕೊಡುತ್ತಾರೆ ಎಂದು ಹೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮೊದಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಹೇಳಿದರು.