ದಾಖಲೆಗಳನ್ನು ಸುಟ್ಟು ಹಾಕಿರುವುದನ್ನು ಸಚಿವೆ ಶೋಭಾ ನೋಡಿದ್ದರಾ?

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ.

ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ಕರಾವಳಿಯಲ್ಲಿ ಪಕ್ಷದ ಅಭ್ಯರ್ಥಿ ರಾಜು ಪೂಜಾರಿ ಪರ ಒಲವು ಇದೆ. ಗೆಲುವಿಗೆ ಉತ್ತಮ ವಾತಾವರಣವಿದೆ. ಅದಕ್ಕಾಗಿ ಪಕ್ಷದ ನಾಯಕರು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ಜನಪರ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದ್ದೇವೆ. ಮತದಾರರು ಕೂಡ ಕಾಂಗ್ರೆಸ್‌ ಪಕ್ಷದ ಯೋಜನೆಗಳ ಬಗ್ಗೆ ವಿಶ್ವಾಸವಿಟ್ಟಿದ್ದಾ ರೆ. ಪಂಚ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕೈ ಬಿಡುವುದಿಲ್ಲ. ಪ್ರತಿ ಪಂಚಾಯತಿಗೆ ಎರಡು ಕೋಟಿ ಅನುದಾನ ತರಲು ಉದ್ಯೋಗ ಖಾತ್ರಿ ಸಹಕಾರಿಯಾಗಿದೆ. ಇದನ್ನು ಜಾರಿಗೆ ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ. ಬಿಜೆಪಿಯವರು ಏನೇ ಮಾಡಿದರೂ ನಮ್ಮ ಅಭ್ಯರ್ಥಿ ರಾಜು ಪೂಜಾರಿ ಗೆದ್ದೇ ಗೆಲ್ಲುವರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಶೋಭಾ ಕರಂದ್ಲಾಜೆ ಹೇಳಿಕೆ ತಿರುಗೇಟು
ಜಾರಿ ನಿರ್ದೇಶನಾಲಯ (ಇಡಿ) ದಾಳಿ ಹಿನ್ನೆಲೆಯಲ್ಲಿ ದಾಖಲೆಗಳನ್ನು ಸುಟ್ಟು ಹಾಕಲಾಗಿದೆ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಓರ್ವ ಮಹಿಳೆಯಾಗಿ ಗೌರವಿಸುವೆ. ಆದರೆ, ಸುಳ್ಳು ಹೇಳುವುದನ್ನು ಸಹಿಸುವುದಿಲ್ಲ; ದಾಖಲೆಗಳನ್ನು ಸುಟ್ಟು ಹಾಕಿರುವುದನ್ನು ಅವರೇನು ನೋಡಿದ್ದರಾ? ಎಂದು ಪ್ರಶ್ನಿಸಿದರು.

ಇಡಿ ದಾಳಿಯೇ ರಾಜಕೀಯ ಪ್ರೇರಿತವಾದುದು. ರಾಜಭವನ, ರಾಜ್ಯಪಾಲರು ತುಂಬಾ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದೇ ಕೇಂದ್ರ ಸರ್ಕಾರದ ಹುನ್ನಾರವಾಗಿದೆ ಎಂದು ಕಿಡಿಕಾರಿದರು.

ಡಾ. ಕಸ್ತೂರಿ ರಂಗನ್ ವರದಿ ಬಗ್ಗೆ ಈಗಾಗಲೇ ಸರ್ಕಾರದ ಮಟ್ಟದಲ್ಲಿ ಸುದೀರ್ಘ ಚರ್ಚೆಯಾಗಿದೆ. ಸದ್ಯ ನೀತಿಸಂಹಿತೆ ಇರುವ ಕಾರಣ ಈಗ ಯಾವುದೇ ಭರವಸೆ ನೀಡುವುದಿಲ್ಲ. ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಜೊತೆ ಚರ್ಚೆ ಮಾಡಿ ಸೂಕ್ತ ನಿರ್ಧಾರಕ್ಕೆ ಬರಲಿದ್ದೇವೆ ಎಂದು ತಿಳಿಸಿದರು.

ಪಂಚಮಸಾಲಿ 2A ಮೀಸಲಾತಿ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಉಪಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಭೆಯಲ್ಲಿ ನಡೆದ ವಿಚಾರವನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕೇಂದ್ರವನ್ನು ಬಿಜೆಪಿಗರು ಪ್ರಶ್ನಿಸಲಿ
ರಾಜ್ಯ ಸರ್ಕಾರದಿಂದ ಕರಾವಳಿಗೆ ಅನ್ಯಾಯ ಆಗುತ್ತಿದೆ. ಕಾಂಗ್ರೆಸ್ ನಿಂದ ಬಿಡಿಗಾಸು ಅನುದಾನ ಇಲ್ಲ ಎಂಬ ಬಿಜೆಪಿ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, ಕೇಂದ್ರದಿಂದಾಗುವ ಅನ್ಯಾಯದ ಬಗ್ಗೆ ಬಿಜೆಪಿ ನಾಯಕರು ಏಕೆ ಧ್ವನಿ ಎತ್ತುತ್ತಿಲ್ಲ? ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆದರೆ ಜನರನ್ನು ದಾರಿ ತಪ್ಪಿಸಿ, ಕಾಂಗ್ರೆಸ್‌ ಮೇಲೆ ಗೂಬೆ ಕೂರಿಸುವ ಕೆಲಸ ಮಾತ್ರ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟು ಬೇರೇನು ಗೊತ್ತಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಹಿರಿಯ ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಗೋಪಾಲ್ ಪೂಜಾರಿ, ಐವಾನ್ ಡಿಸೋಜ, ಉದಯ್ ಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ, ಪ್ರಸಾದ್ ಕಾಂಚನ್, ಎಂ.ಎ.ಗಪೂರ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!