ಅರಬ್ಬಿ ಸುಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು : ಬಂಗಾಳ ಕೊಲ್ಲಿಯ ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ, ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಚಿತ್ರದುರ್ಗ ತುಮಕೂರು ಜಿಲ್ಲೆಗಳಿಗೆ ಅ.20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಅ.20 ರಂದು ಒಂದೇ ದಿನ ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗು ಕರಾವಳಿ, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದಿದೆ.