ಅ.27: ಉಡುಪಿಯಲ್ಲಿ “ಜಾನಪದ ಹಬ್ಬ-2024”

Oplus_131072

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ಸಹಯೋಗದಲ್ಲಿ “ಜಾನಪದ ಹಬ್ಬ-2024” ಕಾರ್ಯಕ್ರಮವನ್ನು ಇದೇ ಅ.27ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಜಾನಪದ ಹಬ್ಬವನ್ನು ಉದ್ಘಾಟಿಸಲಿದ್ದಾರೆ. ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಕಾರ್ಯ ನಿರ್ವಾಹಕ ನಿರ್ದೇಶಕರಾದ ಕಿಶೋರ್ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 3.45ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯೋಗ ಟೀಚರ್ ಶೋಭಾ ಶೆಟ್ಟಿ ಅವರಿಗೆ ಜಾನಪದ ಸಾಂಸ್ಕೃತಿಕ ಯೋಗ ಸಾಧಕ ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದರು.

ಕಾರ್ಯದರ್ಶಿ ರವಿರಾಜ್ ನಾಯಕ್ ಮಾತನಾಡಿ, ಬೆಳಿಗ್ಗೆ 10ಗಂಟೆಗೆ ಕುಣಿತ ಭಜನೆ, ಬೆಳಿಗ್ಗೆ 11.30ಕ್ಕೆ ಹೋಳಿ ಕುಣಿತ, ಬೆಳಿಗ್ಗೆ 11.50ಕ್ಕೆ ಗೋಂದೋಳು ಕುಣಿತ, ಮಧ್ಯಾಹ್ನ 12.20ಕ್ಕೆ ಜಾನಪದ ವಾದ್ಯಗೋಷ್ಠಿ ಹಾಗೂ ಮಧ್ಯಾಹ್ನ 2 ಗಂಟೆಗೆ ಕಲಾಮಯ ಉಡುಪಿ ತಂಡದವರಿಂದ ವೈವಿಧ್ಯಮಯ ಜಾನಪದ ನೃತ್ಯ ಹಾಗೂ ಸಂಗೀತ ಪ್ರದರ್ಶನ ನಡೆಯಲಿದ್ದು, ಕೇರಳ ವಯನಾಡಿನ ಅಪರೂಪದ ಜಾನಪದ ಕಲೆ “ಗೋತ್ರಂ ನೃತ್ಯ” ವಿಶೇಷ ಆಕರ್ಷಣೆಯಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಹೆಗ್ಡೆ, ಸಂಘಟನಾ ಕಾರ್ಯದರ್ಶಿ ಗೋಪಾಲ್ ಸಿ. ಬಂಗೇರ, ಕೋಶಾಧಿಕಾರಿ ಪ್ರಶಾಂತ್ ಭಂಡಾರಿ ಹಾಗೂ ಉಡುಪಿ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *

error: Content is protected !!