ಕೋವಿಡ್​ ಹಗರಣದ ತನಿಖೆಗೆ ಎಸ್ಐಟಿ ರಚನೆಗೆ ಸಚಿವ ಸಂಪುಟ ಗ್ರೀನ್ ಸಿಗ್ನಲ್‌!

ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್​ಐಟಿ ರಚನೆ ಮಾಡಲಾಗುವುದು. ವರದಿ ಆಧರಿಸಿ ಎಸ್ಐಟಿ ತನಿಖೆ ಆಗಲಿದೆ ಎಂದರು.

ಕೊವಿಡ್​ ವೇಳೆ ಕಿಟ್, ಔಷಧಿ ಖರೀದಿ ವೇಳೆ ಅಕ್ರಮ ನಡೆದಿದೆ. ಕೊವಿಡ್ ಹಗರಣ ಸಂಬಂಧ ಹಲವು ದೂರುಗಳು ದಾಖಲಾಗಿದ್ದವು. ಈ ಕುರಿತು ಸಮಗ್ರ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಗತ್ಯ ಬಿದ್ದರೆ FIR ದಾಖಲಾಗುತ್ತೆ, ಚಾರ್ಜ್ ಶೀಟ್ ಕೂಡ ಹಾಕುತ್ತೇವೆ. ಯಾರ ವಿರುದ್ಧ FIR ದಾಖಲಿಸಬೇಕೆಂದು SIT ನಿರ್ಧರಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೊವಿಡ್​ ಹಗರಣದ ವಿಷಯ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಸಚಿವ ಸಂಪುಟ ತೀರ್ಮಾನಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ಅಂದಿನ ಬಿಜೆಪಿ ಸರ್ಕಾರದಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ನ್ಯಾ.ಕುನ್ಹಾ ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಸಮಿತಿಯ ವರದಿ ಆಧಾರದ ಮೇಲೆ ಸರ್ಕಾರ ಕಾನೂನು ಕ್ರಮಕ್ಕೆ ಪ್ರಕ್ರಿಯೆ ಆರಂಭಿಸಿದೆ ಎಂದು ಮಂಗಳವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಹೇಳಿದ್ದರು.

Leave a Reply

Your email address will not be published. Required fields are marked *

error: Content is protected !!