ಎಎನ್‌ಎಫ್ ಎನ್‌ಕೌಂಟರ್‌ಗೆ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿ
ಉಡುಪಿ: ಕಾರ್ಕಳ ತಾಲೂಕಿನ ಹೆಬ್ರಿ ಕಬ್ವಿನಾಲೆಯ ಸೀತಂಬೈಲುವಿನಲ್ಲಿ ಸೋಮವಾರ ರಾತ್ರಿ ಎ ಎನ್ ಎಫ್ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಮೃತಪಟ್ಟಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಕಾರ್ಕಳ, ಹೆಬ್ರಿ ಪರಿಸರದಲ್ಲಿ ಕೆಲದಿನಗಳಿಂದ ನಕ್ಸಲ್ ಓಡಾಟ ಪತ್ರೆಯಾಗಿತ್ತು. ಈ ಹಿನ್ನಲೆಯಲ್ಲಿ ಎಎನ್ ಎಫ್ ಕೂಂಬಿಂಗ್ ಬಿಗಿಗೊಳಿಸಿತ್ತು. ಸೋಮವಾರ ರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಎಎನ್ ಎಫ್ ತಂಡ ಕಾರ್ಯಾಚರಣೆ ನಡೆಸಿದೆ. ಈ ವೇಳೆ ದಾಳಿ-ಪ್ರತಿದಾಳಿ ನಡೆದಿದ್ದು, ದಾಳಿಗೆ ಸಿಲುಕಿ ವಿಕ್ರಂ ಗೌಡ ಕೊನೆಯುಸಿರು ಎಳೆದಿದ್ದಾನೆ. ಇತನ ಜೊತೆ ಇದ್ದ ಉಳಿದ ನಾಲ್ವರು ಕಾಡಿನ ಹಾದಿಯಲ್ಲಿ ಪರಾರಿಯಾಗಿದ್ದಾರೆ. ಎಎನ್ ಎಫ್ ಕೂಂಬಿಂಗ್ ಮುಂದುವರಿಸಿದ್ದು, ಇನ್ನುಳಿದವರಿಗಾಗಿ ಶೋಧ ನಡೆಸುತ್ತಿದೆ.
ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ ಮನೆಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ಸುದ್ದಿಯಾಗಿತ್ರು. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿ, ಅರಣ್ಯ ಒತ್ತುವರಿ ಮತ್ತು ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಮಾರ್ಚ್ ನಲ್ಲಿ ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ನಕ್ಸಲರು ಭೇಟಿ ನೀಡಿದ್ದರು. ಮಾ. 23ರಂದು ಕಡಬ ತಾಲೂಕಿನಲ್ಲಿ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿ ಊಟ ಮಾಡಿ ತೆರಳಿದ್ದರು.