ಅರ್ಹರಿಗೆ ಪಡಿತರ, ಗ್ಯಾರಂಟಿ ಯೋಜನೆ ತಲುಪಿಸಿ- ಸಚಿವೆ ಹೆಬ್ಬಾಳಕರ್ ಖಡಕ್ ಸೂಚನೆ
ಉಡುಪಿ, ನ.30: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ವಾಡಿಕೆಗಿಂಡ ಶೇ.17 ರಷ್ಟು ಹೆಚ್ಚು ಮಳೆಯಾಗಿದೆ. ಹೆಚ್ಚಿನ ಮಳೆಯಿಂದಾಗಿ ಬೆಳೆಹಾನಿ, ಮೂಲಭೂತ ಸೌಕರ್ಯಗಳಾದ ರಸ್ತೆ, ಸರ್ಕಾರಿ ಕಟ್ಟಡಗಳು, ಸೇತುವೆ ಸೇರಿದಂತೆ ಮತ್ತಿತ್ತರ ಆಸ್ತಿ ಪಾಸ್ತಿಗಳಿಗೆ ಹಾನಿವುಂಟಾಗಿದೆ. ಈ ಸಂಬಂಧ ಈಗಾಗಲೇ ಬೆಳೆಹಾನಿ, ಮಾನವನಹಾನಿಗೆ ಸೇರಿದಂತೆ ಮತ್ತಿತರ ಹಾನಿಗಳಿಗೆ ಪರಿಹಾರವನ್ನು ನೀಡಲಾಗಿದೆ ಎಂದರು.
ಮೂಲಭೂತ ಸೌಕರ್ಯಗಳ ಹಾನಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಪ್ರಕೃತಿ ವಿಕೋಪ ಅನುದಾನದ ಅಡಿಯಲ್ಲಿ ಕೈಗೊಳ್ಳಲಾಗಿದೆ. ಇದಕ್ಕೆ ಅನುದಾನದ ಕೊರತೆ ಇದೆ. ವಿಧಾನಸಭಾ ಅಧಿವೇಶನದ ಸಮಯದಲ್ಲಿ ಜಿಲ್ಲೆಯ ಶಾಸಕರೊಂದಿಗೆ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿ ಹೋಗಿ ಅನುದಾನ ಜಿಲ್ಲೆಗೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಪಶ್ಚಿಮ ವಾಹಿನಿ ಯೋಜನೆಯಡಿ ಕರಾವಳಿ ಭಾಗದಲ್ಲಿ ಪಶ್ಚಿಮಾಭಿಮುಖವಾಗಿ ನದಿಗಳ ಸಿಹಿ ನೀರು ಹರಿದು ಸಮುದ್ರ ಸೇರುತ್ತಿದ್ದು, ನೀರು ವ್ಯರ್ಥ ಆಗುತ್ತಿದೆ. ಇದನ್ನು ತಡೆಯಲು ಕಿಂಡಿ ಅಣೆಕಟ್ಟುಗಳನ್ನು ಕಳೆದ ನಾಲ್ಕೈದು ವರ್ಷಗಳಿಂದ 666 ನಿರ್ಮಾಣ ಮಾಡಲಾಗಿದೆ. ಸಾಮಾನ್ಯವಾಗಿ ನವೆಂಬರ್ ತಿಂಗಳಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಅಳವಡಿಸುವ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿತ್ತು, ಈಗಾಗಲೇ ಶೇಡಕ 50 ಕ್ಕೂ ಹೆಚ್ಚು ಹಲಗೆ ಅಳವಡಿಸಲಾಗಿದ್ದು, ಬಾಕಿ ಉಳಿದಿರುವುದಕ್ಕೆ ಡಿಸೆಂಬರ್ 20 ರೊಳಗೆ ಅಳವಡಿಸಲು ಸೂಚನೆ ನೀಡಿದ ಅವರು, ದುರಸ್ತಿಗಾಗಿ ಅನುದಾನ ಸಹ ಬಿಡುಗಡೆ ಮಾಡಲಾಗಿದೆ. ಇವುಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದರು.
ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಅಂತರ್ಜಲ ವೃದ್ಧಿಯಾಗಿದೆ ಎಂಬುದರ ವೈಜ್ಞಾನಿಕ ವರದಿಯನ್ನು ನೀಡಲು ಸೂಚನೆ ನೀಡಿದ ಅವರು, ನಗರಾಭಿವೃದ್ಧಿ ಅನುದಾನದಲ್ಲಿ 15 ದಿನಗಳ ಒಳಗಾಗಿ ಕೆರೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತಿಳಿಸಿದರು.
ಮೀನುಗಾರಿಕೆಗೆ ಅನುಕೂಲವಾಗುವ ಉದ್ದೇಶದಿಂದ ಹೆಜಮಾಡಿ ಮೀನುಗಾರಿಕೆ ಬಂದರಿನ ಅಭಿವೃದ್ಧಿ ಕಾಮಗಾರಿ ಶೇ.80ರಷ್ಟು ಮುಕ್ತಾಯಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಮುಕ್ತಾಯ ಗೊಳಿಸಬೇಕು, ಹಂಗಾರಕಟ್ಟೆಯಲ್ಲಿ ಕೋಸ್ಟಲ್ ಬರ್ತ್ ಕಾಮಗಾರಿಗೆ ಕರ್ನಾಟಕ ರಾಜ್ಯ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರ ಅನುಮೋದನೆ ದೊರಕಿದೆ. ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದ ಅವರು, ಗಂಗೊಳ್ಳಿಯ ಕೋಸ್ಟಲ್ ಬರ್ತ್ ಕಾಮಗಾರಿ ಕೈಗೊಳ್ಳಲು ಸಿಆರ್.ಝೆಡ್ ನ ನಿರಾಕ್ಷೇಪಣಾ ಪತ್ರ ಪಡೆದು ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಕರಾವಳಿ ಭಾಗದ ಮೀನುಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಳೆಯಿಂದ ಹಾನಿಯಾಗಿರುವ ರಸ್ತೆ ದುರಸ್ತಿ ಕಾಮಗಾರಿಗೆ ಅನುದಾನ ಕೋರಿ ಅಧಿವೇಶನದ ವೇಳೆ ಸಿಎಂ ಭೇಟಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕಾಡುಗಳ ತಪ್ಪಲಲ್ಲಿ ವಾಸಿಸುವ ಮಲೆಕುಡಿಯ, ಕೊರಗ ಬುಡಕಟ್ಟು ಸಮುದಾಯದವರಿಗೆ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳೂ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಕೆಲವರು ರೇಷನ್ ಕಾರ್ಡ್ ಹೊಂದಿಲ್ಲವೆಂಬ ಕಾರಣದಿಂದ ಪಡಿತರ ಹಾಗೂ ಗ್ಯಾರಂಟಿ ಯೋಜನೆಗಳು ತಲುಪಿಲ್ಲ. ಅರ್ಹರಿರುವ ಪ್ರತಿಯೊಬ್ಬರಿಗೂ ಇವುಗಳನ್ನು ತಲುಪಿಸಲು ಖಡಕ್ ಸೂಚನೆ ನೀಡಿದರು.
ಉಡುಪಿ ನಗರಕ್ಕೆ ಕುಡಿಯುವ ನೀರನ್ನು ಒದಗಿಸಲು ವರಾಹಿ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಿದ ಅವರು, ವರಾಹಿ ನೀರಾವರಿ ಯೋಜನೆಗೆ 9 ಕಿಮೀ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಪೂರ್ವನುಮತಿ ಈಗಾಗಲೇ ನೀಡಲಾಗಿದ್ದು, ಕೆಲವು ಕಾಮಗಾರಿನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಇದರಿಂದ 2700 ಹೆಕ್ಟೇರ್ ನೀರಾವರಿ ಪ್ರದೇಶಗಳಿಗೆ ಅನುಕೂಲವಾಗಲಿದೆ ಎಂದರು.
ಬಡ ಜನರಿಗೆ 94 ಸಿ ಹಾಗೂ 53, 54 ನಲ್ಲಿ ಜಾಗ ಕೋರಿ ಸಲ್ಲಿಸಿದ ಅರ್ಜಿಗಳಲ್ಲಿ ಜಿಲ್ಲೆಯಲ್ಲಿ ಸಾವಿರಾರು ಅರ್ಜಿಗಳನ್ನು ಅನರ್ಹಗೊಳಿಸಲಾಗಿವೆ ಎಂಬ ದೂರುಗಳು ಕೇಳಿ ಬರುತ್ತಿವೆ. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಲ್ಲಿ ಬರದೇ ಇರುವ ಪ್ರದೇಶದ ಜಾಗವನ್ನು ಸರ್ವೇ ಮಾಡಿ, ಸೂಕ್ತ ಭೂಮಿಯನ್ನು ಗುರುತಿಸಿ, ಅರ್ಹರಿಗೆ ಹಕ್ಕು ಪತ್ರಗಳನ್ನು ನೀಡುವಂತೆ ನೋಡಿಕೊಳ್ಳಬೇಕು. ಈಗಾಗಲೇ ತಾಲೂಕು ಮಟ್ಟದ ಸಮಿತಿಗಳು, ಆಯ್ಕೆ ಮಾಡಿರುವ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಕೂಡಲೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಗೆ ಈಗಾಗಲೇ ಹೊಸದಾಗಿ ಎರಡು ಹಾಸ್ಟೆಲ್‌ಗಳು ಮಂಜೂರಾಗಿದೆ. ಪ್ರತೀ ತಾಲೂಕಿಗೂ ಹಾಸ್ಟೆಲ್‌ಗಳು ಬೇಕೆಂಬ ಬೇಡಿಕೆಯನ್ನು ಶಾಸಕರು ತಿಳಿಸಿದ್ದಾರೆ. ಹೊಸದಾಗಿ ಹೆಚ್ಚುವರಿ ಹಾಸ್ಟೆಲ್‌ಗಳನ್ನು ಜಿಲ್ಲೆಗೆ ತರಲು ಪ್ರಯತ್ನಿಸಲಾಗುವುದು ಎಂದರು.
ಗ್ರಾಮೀಣ ಭಾಗಗಳಲ್ಲಿ ಕಳೆದ ಹಲವು ತಿಂಗಳಿನಿAದ ತಾಂತ್ರಿಕ ಕಾರಣದಿಂದಾಗಿ ಘನತಾಜ್ಯ ವಿಲೇವಾರಿ ವೈಜ್ಞಾನಿಕ ರೀತಿಯಲ್ಲಿ ಆಗುತ್ತಿಲ್ಲ. ಇದನ್ನೂ ಕೂಡಲೇ ಬಗೆಹರಿಸಿ, ತ್ಯಾಜ್ಯ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸ ಬೇಕೆಂದರು. ಜನ ಸಾಮಾನ್ಯರು ಮನೆಕಟ್ಟಲು ಪರವಾನಿಗೆ ಪಡೆಯಲು ತೊಂದರೆಯಾಗುತ್ತಿದೆ. ಇದನ್ನು ಆರ್‌ಡಿಪಿಆರ್, ಕಂದಾಯ, ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದೊಂದಿಗೆ ಸಮಸ್ಯೆಗಳನ್ನು ಬಗೆಹರಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡ ಬೇಕು ಎಂದು ಸೂಚಿಸಿದರು.
ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸೀಫುಡ್ ಪಾರ್ಕ್ ನಿರ್ಮಾಣ ಮಾಡಲು ಈಗಾಗಲೇ ಜಮೀನು ಮಂಜೂರಾಗಿದ್ದು, 69 ಏಕರೆ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವುಗೊಳಿಸುವ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಬೇಕು. ಮರ ತೆರವುಗೊಳಿಸುವ ಸಂದರ್ಭದಲ್ಲಿ ಆದಷ್ಟು ಮರಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಜಿಲ್ಲೆಯ ಜನ ಸಾಮಾನ್ಯರಿಗೆ ಮನೆಕಟ್ಟಲು ಸರಳವಾಗಿ ಮರಳು ಲಭ್ಯವಾಗುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದ ಸಚಿವರು, ಮನೆಕಟ್ಟಲು ಅಗತ್ಯವಿರುವ ಕೆಂಪು ಕಲ್ಲುಗಳ ಗಣಿಗಾರಿಕೆಗೆ ಅಧಿಕಾರಿಗಳು ಜಿಲ್ಲೆಯಲ್ಲಿ ತಡೆಹಿಡಿದಿರುವ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿದೆ. ಅಧಿಕಾರಿಗಳು ಕೆಂಪು ಕಲ್ಲುಗಳನ್ನು ತೆಗೆಯಲು ನಿಯಮಾನುಸಾರ ಅನುಮತಿ ನೀಡಬೇಕೆಂದು ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ಸುನೀಲ್ ಕುಮಾರ್.ವಿ, ಗುರ್ಮೆ ಸುರೇಶ್ ಶೆಟ್ಟಿ, ಯಶ್ ಪಾಲ್ ಎ ಸುವರ್ಣ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಡಿಎಫ್‌ಓ ಗಣಪತಿ, ವೈಲ್ಡ್ ಲೈಫ್ ಡಿಎಫ್‌ಓ ಶಿವರಾಮ ಎಂ ಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕೆಡಿಪಿ ಸದಸ್ಯರು ಉಪಸ್ಥಿತರಿದ್ದರು.