ಶಾಲಾ-ಕಾಲೇಜುಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳು ಮಾರಾಟ ಮಾಡಿದರೆ ಉದ್ದಿಮೆ ಪರವಾನಿಗೆ ರದ್ದು- ಜಿಲ್ಲಾಧಿಕಾರಿ

ಉಡುಪಿ, ಡಿ.03: ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ- ಕಾಲೇಜುಗಳ ವ್ಯಾಪ್ತಿಯ ನೂರು ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ್ದಲ್ಲಿ ಕ್ರಮಕೈಗೊಳ್ಳ ಲು ಸೂಚನೆ ನೀಡಿದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಲಾಡಿ, ಉಪ್ಪುಂದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರು ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್ ಅನ್ನು ನೀಡಲಾಗಿದೆ. ಇದು ಸರಿಯಲ್ಲ ಅಂತಹವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ದೂರು ನೀಡಲು ಸರಕಾರ ಆಪ್ ಅನ್ನು ಅಭಿವೃದ್ಧಿ ಪಡಿಸಿದ್ದು, “STOP TOBACCO” ಆಪ್ ಆಗಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಪ್ರಚಾರ ಪಡಿಸಬೇಕು. ಸಾರ್ವಜನಿಕರು ಸಹ ಅದರ ಬಳಕೆಮಾಡಿಕೊಳ್ಳುವುದ ರೊಂದಿಗೆ ಆನ್‌ಲೈನ್ ನಲ್ಲಿ ಸೂಕ್ತ ಪ್ರಾಧಿಕಾರಕ್ಕೆ ಅಥವಾ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.

ಶಾಲಾ-ಕಾಲೇಜುಗಳ ಪ್ರಾಚಾರ್ಯರ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ಬಳಕೆ ಮಾಡುತ್ತಿದ್ದಾರಾ ಎಂದು ನಿಗಾ ವಹಿಸುವುದರೊಂದಿಗೆ, ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕಂಡು ಬಂದಲ್ಲಿ ಕೋಟ್ಪಾ ಕಾಯಿದೆ ಅನುಷ್ಠಾನ ಸಮಿತಿಗೆ ಕೂಡಲೇ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿ 2024 ರ ಏಪ್ರಿಲ್‌ನಿಂದ ಈವರೆಗೆ 54 ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, 151 ಕ್ಕೂ ಹೆಚ್ಚು ಪ್ರಕರಣವನ್ನು ದಾಖಲಿಸಿಕೊಂಡು 16,070 ರೂ ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ದಾಳಿಗಳನ್ನು ನಿರಂತರವಾಗಿ ಆಗಿಂದಾಗ್ಗೆ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ..ಅರುಣ್ ಕೆ, ಎ.ಎಸ್.ಪಿ ಪಿ.ಎ ಹೆಗಡೆ, ಡಿ.ಎಫ್.ಓ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ. ಗಡಾದ್, ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ, ಡಿಡಿಪಿಐ ಗಣಪತಿ, ಡಿಡಿಪಿಯು ಮಾರುತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!