ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ: ತೇಜಸ್ವಿ ಸೂರ್ಯ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ವಕ್ಫ್ ನೋಟಿಸ್ ನೀಡಿದ್ದಕ್ಕೆ ಹಾವೇರಿಯ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಟ್ವೀಟ್ ಮಾಡುವ ಮೂಲಕ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಿದ್ದ ಎಫ್ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವಾದ-ಪ್ರತಿವಾದ ಬಳಿಕ ತೀರ್ಪು ಕಾಯ್ದಿರಿಸಿತ್ತು. ಇಂದು ಎಫ್ಐಆರ್ ರದ್ದುಗೊಳಿಸಿ ತೀರ್ಪು ನೀಡಲಾಗಿದೆ.
ಮೃತ ರೈತನ ತಂದೆಯ ಹೇಳಿಕೆ ಆಧರಿಸಿ ತೇಜಸ್ವಿ ಸೂರ್ಯ ಅವರು ಟ್ವೀಟ್ ಮಾಡಿದ್ದರು. ಪೊಲೀಸರ ಸ್ಪಷ್ಟನೆ ನಂತರ ಟ್ವೀಟ್ ಡಿಲೀಟ್ ಮಾಡಲಾಗಿದೆ. ಹೀಗಾಗಿ ಪ್ರಕರಣ ರದ್ದುಪಡಿಸುವಂತೆ ಹಿರಿಯ ವಕೀಲ ಅರುಣ್ ಶ್ಯಾಮ್ ಅವರು ಬಿಜೆಪಿ ಸಂಸದನ ಪರ ವಾದ ಮಂಡಿಸಿದ್ದರು.
ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಬಳಿಕ ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.