ಉಡುಪಿ: ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ನೌಕರರಿಂದ ಅಹೋರಾತ್ರಿ ಧರಣಿ
ಉಡುಪಿ: ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಐಸಿಡಿಎಸ್ (ICDS) ಪ್ರತ್ಯೇಕ ನಿರ್ದೇಶನಾಲಯ ಮಾಡಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಹಾಗೂ 2018ರಿಂದ ಕೇಂದ್ರ ಸರ್ಕಾರದ ವೇತನ ಹೆಚ್ಚಿಸದ ಧೋರಣೆ ಖಂಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಉಡುಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ಆರಂಭಗೊಂಡಿತು.
ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರು ಹಾಗೂ ಸಹಾಯಕಿಯರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಕೇಂದ್ರ ಹಾಗೂ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಗುಜರಾತ್ ಹೈಕೊರ್ಟ್ ತೀರ್ಪಿನಂತೆ ಕಾರ್ಯಕರ್ತೆ, ಸಹಾಯಕಿಯರನ್ನು ವರ್ಗ 3 ಮತ್ತು 4 ಎಂದು ಪರಿಗಣಿಸಿ ಖಾಯಂ ಮಾಡಬೇಕು. ಗ್ರಾಚ್ಯುಟಿ ಹಣ ಕೂಡಲೇ ಬಿಡುಗಡೆ ಮಾಡಬೇಕು. 2018ರಿಂದ ಕೇಂದ್ರ ಸರ್ಕಾರ ಯಾವುದೇ ಗೌರವಧನ ಹೆಚ್ಚಳ ಮಾಡಿಲ್ಲ, ಹೀಗಾಗಿ 26 ಸಾವಿರ ರೂ. ಗೌರವಧನ ಹೆಚ್ಚಿಸಬೇಕು. ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ಘೋಷಣೆ ಮಾಡಿದ 15 ಸಾವಿರ ರೂ. ಗಳಿಗೆ ಗೌರವಧನ ಹೆಚ್ಚಿಸಬೇಕು. ಶಿಕ್ಷಣ ಇಲಾಖೆ ಮತ್ತು SDMC ಗಳಿಂದ ಪ್ರಾರಂಭ ಮಾಡಿರುವ LKG-UKG ನಿಲ್ಲಿಸಿ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಅಂಗನವಾಡಿ ಕೇಂದ್ರಗಳಲ್ಲಿಯೇ LKG-UKG ಪ್ರಾರಂಭಿಸಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಭಾರತಿ, ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ, ಕೋಶಾಧಿಕಾರಿ ಯಶೋಧಾ, ಸಿಐಟಿಯು ಜಿಲ್ಲಾಧ್ಯಕ್ಷ ಕೆ. ಶಂಕರ್, ಮುಖಂಡರಾದ ಸುರೇಶ್ ಕಲ್ಲಾಗರ, ಕವಿರಾಜ್ ಎಸ್ ಮೊದಲಾದವರು ಇದ್ದರು.