ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ- ಕೆ. ಉದಯಕುಮಾರ್ ಶೆಟ್ಟಿ
ಉಡುಪಿ: ಆತ್ಮಹತ್ಯೆ ಹಾಗೂ ಬಾಣಂತಿ ಸಾವಿನಲ್ಲಿ ಸರಕಾರ ಪೈಪೋಟಿಗೆ ಬಿದ್ದಂತಿದೆ. ಇತಿಹಾಸದಲ್ಲೇ ಈ ರೀತಿಯ ದುರಾಡಳಿತವನ್ನು ರಾಜ್ಯ ಕಂಡಿರಲಿಲ್ಲ. ರಾಜ್ಯದಲ್ಲಿ ಹೆರಿಗೆಗೆ ಸರಕಾರಿ ಆಸ್ಪತ್ರೆಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಲ್ಲಿಕಾರ್ಜುನ ಖರ್ಗೆ ಹೈಕಮಾಂಡ್, ರಾಜ್ಯದಲ್ಲಿ ಪ್ರಿಯಾಂಕ ಖರ್ಗೆ ಮಿನಿ ಕಮಾಂಡ್. ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಎನ್ನುವ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ತಪ್ಪನ್ನು ಸಮರ್ಥಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಗುತ್ತಿಗೆದಾರ ಸಚಿನ್ ಅವರ ಆತ್ಮಹತ್ಯೆ ಪ್ರಕರಣವು ರಾಜ್ಯ ಮಾತ್ರವಲ್ಲ. ದೇಶಾದ್ಯಂತ ಸುದ್ದಿಯಾಗಿದೆ. ಅವರು ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ ಕಿರುಕುಳದ ಉಲ್ಲೇಖವಿದೆ.
ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಬರೆದಿಟ್ಟ ಡೆತ್ ನೋಟಿನ ಮಾಹಿತಿ ಸತ್ಯಕ್ಕೆ ದೂರವಾಗುವ ಸಾಧ್ಯತೆ ಇಲ್ಲ. ರಾಜ್ಯದ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಸರಕಾರಿ ಪ್ರಾಯೋಜಿತ ಆತ್ಮಹತ್ಯೆಗಳು ಮತ್ತು ರಾಜ್ಯ ಸರಕಾರದ ಕುಮ್ಮಕ್ಕಿನ ಆತ್ಮಹತ್ಯೆ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿವೆ.ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆ ನೀಡಬೇಕು ಮತ್ತು ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಉದಯಕುಮಾರ್ ಶೆಟ್ಟಿ ಒತ್ತಾಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಉಪಸ್ಥಿತರಿದ್ದರು.