ಬಾಣಂತಿಯರ ಸಾವನ್ನು ತಡೆಯಲು ವಿಫಲ- ಸಚಿವರಾದ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಲಿ

ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಒತ್ತಾಯ

ಉಡುಪಿ: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಲು ವಿಫಲರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮಹಿಳಾಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್ ಒತ್ತಾಯಿಸಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಣಂತಿಯರ ಸಾವಿನ ನೈಜ ಕಾರಣಗಳನ್ನು ತಿಳಿಯಲು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್ ಸರಕಾರವು ಆತ್ಮಹತ್ಯೆ ಹಾಗೂ ಹತ್ಯೆ ಭಾಗ್ಯವನ್ನು ಕರ್ನಾಟಕದ ಜನತೆಗೆ ನೀಡಿದೆ. ಕಳೆದ 19 ತಿಂಗಳಲ್ಲಿ 6 ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, 700 ಕ್ಕೂ ಹೆಚ್ಚು ಗರ್ಭಿಣಿಯರು, 1100 ಕ್ಕೂ ಅಧಿಕ ನವಜಾತ ಶಿಶುಗಳ ಸಾವಿಗೆ ಕಾಂಗ್ರೆಸ್ ಸರಕಾರ ಕಾರಣವಾಗಿದೆ. ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರಕಾರ ಜಾರಿಗೊಳಿಸಿರುವ ಜನನಿ ಸುರಕ್ಷಾ ಯೋಜನೆ, ಜನನಿ ಶಿಶು ಸುರಕ್ಷಾ ಕಾರ್ಯಕ್ರಮ ಮೊದಲಾದ ಯೋಜನೆ ಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿ ಸರಕಾರದ ಹೊಣೆಗೇಡಿ ತನದಿಂದಾಗಿ ಸಂಪೂರ್ಣ ಹದಗೆಟ್ಟಿದೆ. ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ ಎಂದು ದೂರಿದರು.

ಸರಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಬೇಕು. ಅನಾಥಗೊಂಡಿರುವ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರ ಆ ಮಕ್ಕಳನ್ನು ದತ್ತು ಪಡೆಯಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ಮಹಿಳಾಮೋರ್ಚಾ ದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!