ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರಿಗೆ ಶೇ.50 ರಷ್ಟು ಬೆಡ್ ಮೀಸಲು ಇಡಬೇಕಾಗಿಲ್ಲ
ಬೆಂಗಳೂರು: ಈ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಕಡ್ಡಾಯವಾಗಿ ಶೇ.50 ರಷ್ಟು ಬೆಡ್ ಮೀಸಲಿಡಬೇಕು ಎಂದು ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಬುಧವಾರ ಪರಿಷ್ಕರಿಸಿದೆ.
ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಹೊರಡಿಸಿದ್ದು, ಇನ್ನು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಬೆಡ್ ಮೀಸಲಿಡುವ ಅಗತ್ಯ ಇಲ್ಲ ಎಂದು ಹೇಳಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಆದೇಶ ಹೊರಡಿಸಿದ್ದು, ಸಾಮಾನ್ಯ ಮತ್ತು ಎಚ್‌ಡಿಯು ಬೆಡ್ ಗಳನ್ನು ಸರ್ಕಾರಿ ಆಸ್ಪತ್ರೆಗಳು ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಮಾತ್ರ ಸೀಮಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಸರ್ಕಾರಿ ಆಸ್ಪತ್ರೆ ಮತ್ತು ಸರ್ಕಾರಿ ವೈದ್ಯಕೀಯ ಕಾಲೇಜ್ ಗಳಲ್ಲಿ ಸಾಮಾನ್ಯ ಮತ್ತು ಎಚ್‌ಡಿಯು ಹಾಸಿಗೆಗಳ ಒಟ್ಟಾರೆ ಲಭ್ಯತೆಯು ಶೇಕಡಾ 10ಕ್ಕಿಂತ ಕಡಿಮೆಯಾಗುವವರೆಗೆ ಇದನ್ನು ಅನುಸರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.