ಉಡುಪಿ: ಹಿರಿಯ ಪತ್ರಕರ್ತ ರವಿ ಹೆಗಡೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ

ಉಡುಪಿ, ಜ.12: ಸಮುದಾಯದ ಧ್ವನಿಯಾಗಿ, ಸಮಾಜದ ಸಾಧ್ಯತೆಗಳನ್ನು, ಬದುಕಿನ ವೈವಿಧ್ಯತೆತೆಯ ಚಿತ್ರಣವಾಗಿ, ಸಾಮಾಜಿಕ ಜವಾಬ್ದಾರಿಯ ಎಚ್ಚರಿಕೆಯ ಗಂಟೆಯಾಗಿ ಪತ್ರಿಕೆ ಕೆಲಸ ಮಾಡುತ್ತಿದೆ ಎಂದು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವಾ ಹೇಳಿದರು.

ಬ್ರಹ್ಮಾವರ ಬಂಟರ ಭವನದಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಜಿಲ್ಲಾ ರಜತೋತ್ಸವ ಸಮಿತಿಯ ಸಹಕಾರದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸಮಾರಂಭವನ್ನು ಉದ್ಘಾಟಿಸಿ ಪತ್ರಿಕೋದ್ಯಮ ಇಂದು ಸಂದಿಗ್ಧ ಸ್ಥಿತಿಯಲ್ಲಿದೆ. ಪ್ರಾಮಾಣಿಕ ಸುದ್ದಿ ಮತ್ತು ಪ್ರಾಮಾಣಿಕ ನಿರ್ಭೀತ ಪತ್ರಿಕೋದ್ಯಮ ಇಂದು ಅಗತ್ಯವಾಗಿದೆ. ಇಂದಿನ ಪತ್ರಿಕೆ ಮತ್ತು ಪತ್ರಕರ್ತರಿಗೆ ಅತಿಯಾಗಿ ವಿಜೃಂಭಿಸಿದೇ ವಾಸ್ತವವನ್ನು ಬಿಂಬಿಸುವ ಪತ್ರಕರ್ತರನ್ನಾಗಿ ಮಾಡಲು ವಡ್ಡರ್ಸೆ ಅವರು ಮಾದರಿ ಹಾಕಿ ಕೊಟ್ಟಿದ್ದಾರೆ ಎಂದು ಹೇಳಿದರು.ಸಂಘದ ಅಧ್ಯಕ್ಷ ರಾಜೇಶ ಗಾಣಿಗ ಅಚ್ಲಾಡಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಹಿರಿಯ ಪತ್ರಕರ್ತ ರವಿ ಹೆಗಡೆ ಅವರಿಗೆ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಪ್ರದಾನಮಾಡಲಾಯಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘದ ಗೌರವಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಭಿನಂದಿಸಲಾಯಿತು.

ಪತ್ರಕರ್ತರಾದ ಜೋಗಿ(ಗಿರೀಶ್ ರಾವ್ ಹತ್ವಾರ್) ಕೆ.ಸಿ.ರಾಜೇಶ ಅಭಿನಂದನಾ ಭಾಷಣ ಮಾಡಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶಪಾಲ್ ಸುವರ್ಣ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೈಕಲ್ ರಾಡ್ರಿಗಸ್, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಬ್ರಹ್ಮಾವರ ಬಂಟರ ಭವನದ ಸಂಚಾಲಕ ಭುಜಂಗ ಶೆಟ್ಟಿ ಇದ್ದರು. ಸಂಘದ ಸ್ಥಾಪಕಾಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕ ವಸಂತ ಗಿಳಿಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಹರೀಶ ಕಿರಣ್ ತುಂಗ ವಂದಿಸಿದರು. ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಶಾಂತ ನೀಲಾವರ, ವಿದ್ಯಾರ್ಥಿ ವಿಘ್ನೇಶ್ ಶೆಣೈ ಮತ್ತು ಇತರೆ ವಿದ್ಯಾರ್ಥಿಗಳ ಸಂಗ್ರಹದ ಅಮೂಲ್ಯ ‘ಮುಂಗಾರು’ ಪತ್ರಿಕೆಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಮಾಧ್ಯಮ ಕ್ಷೇತ್ರ ಸಂಕಷ್ಟದಲ್ಲಿದೆ. ಮಾಧ್ಯಮಉಳಿಯ ಬೇಕಾದರೆ ಓದುಗರ ಸಂಖ್ಯೆ ಹೆಚ್ಚಾಗಬೇಕು ಎಂದು ವಡ್ಡರ್ಸೆ ಪತ್ರಿಕೋದ್ಯಮ ಪ್ರಶಸ್ತಿ ಸ್ವೀಕರಿಸಿ ರವಿ ಹೆಗಡೆ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!