ಬೆಂಗಳೂರು ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಮತ್ತೆ ಒಂದು ದಿನ ಸಿಸಿಬಿ ಕಸ್ಟಡಿಗೆ..!
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಮತ್ತು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಮತ್ತೆ ಒಂದು ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದ್ದು, ಈ ವೇಳೆ ಸಂಪತ್‌ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ ಮತ್ತೆ ಒಂದು ದಿನ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಪುಲಕೇಶಿನಗರ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರ ಅಳಿಯ ನವೀನ್ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯ ಧರ್ಮಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಆಕ್ರೋಶಗೊಂಡ ಕೆಲ ಕಿಡಿಗೇಡಿಗಳು, ಆ.11 ರಂದು ರಾತ್ರಿ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪುಲಕೇಶಿ ನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಹಾಗೂ ಕಚೇರಿ, ಸೋದರ ಅಳಿಯ ನವೀನ್ ಮನೆ ಹಾಗೂ ಎರಡು ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿ ಸ್ವತ್ತುಗಳನ್ನು ಹಾನಿಗೆಡವಿದ್ದರು.
ಬೆಂಕಿ ಹಚ್ಚಿ ವಿಧ್ವಂಸಕ ಕೃತ್ಯ ಎಸಗಿದ್ದರು ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು ಸುಮಾರು 300 ಕ್ಕೂ ಅಧಿಕ ಮಂದಿಯನ್ನು ಅದಾಗಲೇ ಬಂಧಿಸಿದ್ದು, ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಚಾರ್ಜ್ ಶೀಟ್ ಹಾಕುತ್ತಿದ್ದಂತೆ ಅವರು ನಾಪತ್ತೆಯಾಗಿದ್ದರು. ಇದೀಗ ಸೋಮವಾರ ಸಂಜೆ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಮಾಜಿ ಮೇಯರ್ ಸಂಪತ್ ರಾಜ್‌ರನ್ನು ಬಂಧಿಸಿದ್ದು, ಕೋರ್ಟ ಹಾಜರು ಪಡಿಸಿದ ವೇಳೆ ಸಂಪತ್ ರಾಜ್ ರನ್ನು ಕೊರ್ಟ್ ಮತ್ತೆ ಒಂದು ದಿನ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.