ಅಪ್ರಾಪ್ತರಿಗೆ ತಂಬಾಕು ಉತ್ಪನ್ನ ಮಾರಾಟ ಶಿಕ್ಷಾರ್ಹ: ಡಾ.ವಾಸುದೇವ್

ಉಡುಪಿ: ಅಪ್ರಾಪ್ತ ವಯಸ್ಸಿನ ಮಕ್ಕಳಲ್ಲಿ ಧೂಮಪಾನ ಮಾಡುವ ಚಟ ಹೆಚ್ಚಿರುವುದು ಸಮೀಕ್ಷೆಯಿಂದ ತಿಳಿದು ಬಂದಿದ್ದು, ಅಪ್ರ್ರಾಪ್ತ ವಯಸ್ಕರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ವಾಸುದೇವ್ ಹೇಳಿದರು.

ಅವರು ಸೋಮವಾರ ಉಡುಪಿ ತಾಲೂಕು ಆರೋಗ್ಯಾಧಿಕಾರಿಯವರ ಸಭಾಭವನದಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ (ಎನ್.ಟಿ.ಸಿ.ಪಿ) ಮತ್ತು ಕೋಟ್ಪಾ-2003 ಕಾಯ್ದೆಯ ಕುರಿತು ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣ ಸಂಸ್ಥೆಗಳ ಆವರಣದ 100 ಮೀ. ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವುದನ್ನು ನಿಷೇದಿಸಿದ್ದು, ಶಿಕ್ಷಣ ಸಂಸ್ಥೆಯನ್ನು ತಂಬಾಕು ಮುಕ್ತವನ್ನಾಗಿಸುವ ಜವಾಬ್ದಾರಿಯನ್ನು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು ಹೊಂದಿರುತ್ತಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ ಧೂಮಪಾನ ಮಾಡುವುದರಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮುಡಿಸುವ ಕಾರ್‍ಯಕ್ರಮವಾಗಬೇಕು ಎಂದರು.
ತಂಬಾಕು ನಿಯಂತ್ರಣ ಕಾನೂನು ಕೋಟ್ಪಾ-2003 ರ ಪ್ರಕಾರ ಸೆಕ್ಷನ್ ೪ ರಂತೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವುದು ಅಪರಾಧವಾಗಿದ್ದು, ನಿಯಮ ಉಲ್ಲಂಘನೆಯಾದಲ್ಲಿ ರೂ.200 ರವರೆಗೆ ದಂಡ ವಿಧಿಸಲಾಗುವುದಲ್ಲದೇ ಸಾರ್ವಜನಿಕ ಸ್ಥಳದಲ್ಲಿ ಧೂಮಾಪಾನ ಕಂಡುಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ದೂರು ನೀಡಬೇಕು ಎಂದರು.

ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಪ್ರದರ್ಶನ ಮಾಡುವಂತಿಲ್ಲ. ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಬೋರ್ಡ್, ಭಿತ್ತಿಪತ್ರ, ಎಲ್.ಸಿ.ಡಿ ಟಿ.ವಿಗಳ ಮೂಲಕ ಪ್ರಸಾರ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿ ಮಾಲೀಕರು ಆರೋಗ್ಯ ಎಚ್ಚರಿಕೆ ನಾಮ ಫಲಕಗಳನ್ನು ಕಡ್ಡಾಯವಾಗಿ ಅಂಗಡಿ ಮುಂದೆ ಪ್ರದರ್ಶನ ಮಾಡಬೇಕು ಎಂದರು.
ಕೆ.ಎಮ್.ಸಿ ಯ ಡಾ.ಮುರಳೀಧರ್ ಕುಲಕರ್ಣಿ ಮಾತನಾಡಿ, ತಂಬಾಕು ನಿಯಂತ್ರಣ ಘಟಕವು ತಂಬಾಕು ನಿಯಂತ್ರಣ ಕುರಿತು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ತಂಬಾಕಿನಲ್ಲಿ ರಾಸಾಯನಿಕ ವಸ್ತುಗಳಿದ್ದು, ಇದನ್ನು ಸೇವಿಸುವುದರಿಂದ ಕ್ಯಾನ್ಸರ್, ಹೃದಯಸಂಬಂಧಿ ಕಾಯಿಲೆ, ಶ್ವಾಸಕೋಶದ ಕಾಯಿಲೆ ಮುಂತಾದ ಮಾರಾಣಾಂತಿಕ ಕಾಯಿಲೆಗಳು ಹರಡುತ್ತವೆ. ವಿಶ್ವಾದ್ಯಾಂತ 60 ಲಕ್ಷಕ್ಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಯಿಂದ ಸಾವನ್ನಪುತ್ತಿದ್ದು, ಈ ನಿಟ್ಟಿನಲ್ಲಿ ತಂಬಾಕು ನಿಷೇದದ ಕುರಿತು ಸಾರ್ವಜನಿಕರಿಗೆ ತಂಬಾಕು ಸೇವನೆ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಕಾರ್‍ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ, ತಂಬಾಕು ನಿಯಂತ್ರಣ ಘಟಕದ ವಿವಿಧ ಸಿಬ್ಬಂದಿಗಳು, ಆಶಾಕಾರ್‍ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!