ಮತ್ತೆ ಬಲಗೊಳ್ಳುತ್ತಿರುವ ನಿವಾರ್ ಚಂಡಮಾರುತ: ರಾಜ್ಯದಲ್ಲಿ ಡಿ.4 ವರೆಗೆ ಮಳೆ ಸಾಧ್ಯತೆ
ಬೆಂಗಳೂರು: ತಮಿಳುನಾಡಿನಲ್ಲಿ ಅಟ್ಟಹಾಸ ಮೆರೆದಿದ್ದ ನಿವಾರ್ ಚಂಡಮಾರುತ ಬಂಗಾಳಕೊಲ್ಲಿಯಲ್ಲಿ ಮತ್ತೆ ಬಲಗೊಳ್ಳುತ್ತಿದ್ದು, ಇದರಿಂದ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಆದ್ದರಿಂದ ಡಿ.1 ರಿಂದ ಡಿ.4 ರವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ.
ನಿವಾರ್ ಚಂಡಮಾರುತದ ಬೆನ್ನಲ್ಲೇ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವವಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಿತ್ತು.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿದ್ದ ನಿವಾರ್ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಆಗಿರಲಿಲ್ಲ. ಇದೀಗ ಭೂ ಸ್ಪರ್ಶವಾದ ನಂತರ ಚಂಡಮಾರುತ ದುರ್ಬಲಗೊಳ್ಳಬೇಕಿತ್ತು. ಆದರೆ ಅದು ಮತ್ತೆ ಸಮುದ್ರಕ್ಕೆ ಸೇರಿರುವುದರಿಂದ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳಿವೆ ಹವಾಮಾನ ಇಲಾಖೆ ಎಚ್ಚರಿಸಿದೆ.