ಶೀಘ್ರ ಗೋಹತ್ಯೆ ನಿಷೇಧ, ಲವ್ ಜಿಹಾದ್ ತಡೆಗೆ ಕಾಯ್ದೆ: ಬಿಜೆಪಿ ರಾಜ್ಯ ಕಾರ್ಯಕಾರಣಿಯಲ್ಲಿ ನಿರ್ಣಯ
ಬೆಂಗಳೂರು: ರಾಜ್ಯ ಸರಕಾರವು ಗೋಹತ್ಯೆ ನಿಷೇಧ ಕಾಯ್ದೆ ಹಾಗೂ ಲವ್ ಜಿಹಾದ್ ತಡೆಗೆ ಶೀಘ್ರವೇ ಕಾಯ್ದೆಗಳನ್ನು ಅಂಗೀಕರಿಸಿ ಅನುಷ್ಠಾನಕ್ಕೆ ತರಬೇಕು ಎಂಬ ಎರಡು ನಿರ್ಣಯಗಳನ್ನು ಶನಿವಾರ ಬೆಳಗಾವಿಯಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಕಾರ್ಯಕಾರಣಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು, ‘ಲವ್ ಜಿಹಾದ್ ತಡೆ ಹಾಗೂ ಗೋ ಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪಕ್ಷದ ರಾಜ್ಯ ಕಾರ್ಯಕಾರಿಣಿ ನಿರ್ಣಯ ತೆಗೆದುಕೊಂಡಿದೆ. ಈ ವಿಷಯದಲ್ಲಿ ಮುಂದಿನ ನಿರ್ಣಯವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದರು.
ರಾಜ್ಯದಲ್ಲಿ ಲವ್ ಜಿಹಾದ್ ಎನ್ನುವುದು ಬಹಳ ಆತಂಕದ ವಿಷಯ. ಪ್ರೀತಿ–ಪ್ರೇಮದ ಹೆಸರಿನಲ್ಲಿ ಮತಾಂತರ ಮಾಡಿದ ಹಲವು ಪ್ರಕರಣಗಳು ವರದಿಯಾಗಿವೆ. ಹೀಗಾಗಿ, ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕಟೀಲ್ ತಿಳಿಸಿದರು.
ಮುಂಬರುವ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಪಕ್ಷದ ಕಾರ್ಯಕರ್ತರನ್ನು ಗೆಲ್ಲಿಸಿಕೊಳ್ಳುವ ಮೂಲಕ ಗ್ರಾಮ ಸ್ವರಾಜ್ಯ ಪರಿಕಲ್ಪನೆಯಲ್ಲಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ. ಇದು ಕಾರ್ಯಕರ್ತರ ಚುನಾವಣೆ. ಪಕ್ಷದ ಚಿಹ್ನೆ ಇರುವುದಿಲ್ಲ. ಆದರೆ, ಅಲ್ಲಿ ಸ್ಪರ್ಧಿಸುವ ನಮ್ಮ ಕಾರ್ಯಕರ್ತರಿಗೆ ಜನಪ್ರತಿನಿಧಿಗಳು ಬೆಂಬಲ ನೀಡಲಿದ್ದಾರೆ ಎಂದರು.