ಡಿ.08 ಭಾರತ್ ಬಂದ್: ಉಡುಪಿ ಜಿಲ್ಲಾ ಕಾಂಗ್ರೆಸ್, ಸಿಐಟಿಯು ಬೆಂಬಲ
ಉಡುಪಿ: ಕೇಂದ್ರ ಸರಕಾರವು ರೈತ ವಿರೋಧಿ ಕಾಯಿದೆಗಳನ್ನು ವಾಪಾಸ್ಸು ಪಡೆಯಲು ವಿಶೇಷ ಅಧಿವೇಶನ ಕರೆಯಲು ಆಗ್ರಹಿಸಿ ಕಳೆದ 11ದಿನಗಳಿಂದ ದೆಹಲಿಯಲ್ಲಿ ರೈತರು ಧರಣಿ ನಡೆಸುತ್ತಿದ್ದಾರೆ. ರೈತರ ಮುಂದಿನ ಹೋರಾಟದ ಭಾಗವಾಗಿ 300 ರೈತ ಸಂಘಟನೆಗಳು ರೈತರ ಬೇಡಿಕೆಗಳಿಗಾಗಿ ಡಿ.08 ರಂದು ಜನತಾ ಕರ್ಫ್ಯೂ/ ಅಖಿಲ ಭಾರತ ಬಂದ್ ಗೆ ಕರೆ ನೀಡಿರುವುದನ್ನು ಸಿಐಟಿಯು ಉಡುಪಿ ಜಿಲ್ಲಾ ಸಮಿತಿ ಬೆಂಬಲ ವ್ಯಕ್ತಪಡಿಸಿದೆ.
ಈ ಕಾಯಿದೆಗಳು ಜಾರಿಯಾದಲ್ಲಿ ಈಗಾಗಲೇ ಸಂಕಷ್ಟಕ್ಕೆ ಒಳಗಾಗಿರುವ ರೈತರು ಕಾರ್ಪೊರೇಟ್ ಕಂಪೆನಿಗಳ ಹಿಡಿತಕ್ಕೆ ಒಳಗಾಗುತ್ತಾರೆ. ಅದಾನಿ, ಅಂಬಾನಿಗಳ ಸೂಪರ್ ಲಾಭ ಹೆಚ್ಚುತ್ತದೆ. ದವಸ ಧಾನ್ಯಗಳ ಉತ್ಪಾದನೆ ತೀವ್ರವಾಗಿ ಕುಂಠಿತಗೊಳ್ಳುತ್ತದೆ. ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಸಿಐಟಿಯು ಅಧ್ಯಕ್ಷ ಕೆ.ಶಂಕರ್, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.
ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಬೆಂಬಲ
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಡಿ.8 ರಂದು ರೈತ ಸಂಘಟನೆಗಳು ಹಮ್ಮಿಕೊಂಡ ಭಾರತ್ ಬಂದ್‌ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ಸೂಚಿಸಿದೆ. ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ಕಳೆದ ಹನ್ನೊಂದು ದಿನಗಳಿಂದ ದಿಲ್ಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲವಾಗಿ ಒಟ್ಟು 40ಕ್ಕೂ ಹೆಚ್ಚು ರೈತ ಸಂಘಟನೆಗಳು ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದು ಎಲ್ಲಾ ವಿಪಕ್ಷಗಳು ಬೆಂಬಲ ಸೂಚಿಸಿವೆ.
ರೈತರ ಬೇಡಿಕೆಗಳಿಗೆ ಒಪ್ಪಿಗೆ ನೀಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದೆ. ದೇಶದಲ್ಲಿ ಕೃಷಿ ಉತ್ಪಾದನೆಯನ್ನು ಸುಸ್ಥಿತಿಯಲ್ಲಿಡಲು ಸರಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕು. ಏಕೆಂದರೆ ದರ ಕುಸಿತಕ್ಕೀಡಾದಾಗ ರೈತರು ಸಂಕಷ್ಟಕ್ಕೀಡಾಗಿ ಉತ್ಪಾದನೆಯಿಂದ ವಿಮುಖರಾಗುತ್ತಾರೆ. ಇದು ಆಹಾರ ಭದ್ರತೆಗೆ ದಕ್ಕೆ ತರಬಹುದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.