ಸಮಾಜದ ಶಾಂತಿ ಕಾಪಾಡುವಲ್ಲಿ ಗೃಹರಕ್ಷಕರ ಕೊಡುಗೆ ಅಪಾರ: ಜಿಲ್ಲಾಧಿಕಾರಿ
ಉಡುಪಿ, ಡಿ.11: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ರಕ್ಷಕದಳವು
ಪೊಲೀಸರಿಗೆ ಸಮನ್ವಯದೊಂದಿಗೆ ಪೂರಕ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಇಂದು ಜಿಲ್ಲಾ ಗೃಹ ರಕ್ಷಕದಳದ ಕಚೇರಿ ಆವರಣದಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕದಳ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಗೃಹರಕ್ಷಕದಳ ದಿನಾಚರಣೆಯನ್ನು ರಕ್ತದಾನ ಮಾಡುವ ಮೂಲಕ ಆಚರಿಸುತ್ತಿರುವುದು ಉತ್ತಮ ವಿಚಾರ. ಒಬ್ಬ ವ್ಯಕ್ತಿ ರಕ್ತದಾನ ಮಾಡುವ ಮೂಲಕ ನಾಲ್ಕು ಜನರ ಜೀವ ಉಳಿಸಿದಂತಾಗುತ್ತದೆ. ರಕ್ತದಾನ ಮಾಡುವುದರಲ್ಲಿ ಉಡುಪಿಯು ಮಾದರಿ ಜಿಲ್ಲೆಯಾಗಿದ್ದು, ಈ ನಿಟ್ಟಿನಲ್ಲಿ ಕೈಜೋಡಿಸಿದ ಗೃಹರಕ್ಷಕರಿಗೆ ಅಭಿನಂದನೆ ಸಲ್ಲಿಸಿದರು.
ತುರ್ತು ಸಂದರ್ಭದಲ್ಲಿ ಸಮಾಜದಲ್ಲಿ ಶಾಂತಿ ಕಾಪಾಡುವಲ್ಲಿ ಗೃಹ ರಕ್ಷಕದಳದವರ ಪಾತ್ರ ಬಹಳ ಮುಖ್ಯ. ಇಂತಹ ಸಂದರ್ಭಗಳಲ್ಲಿ ಅತ್ಯಂತ ಕಾಳಜಿ ವಹಿಸಿ, ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸುವುದರ ಮೂಲಕ ಸೇವೆ ಸಲ್ಲಿಸುತ್ತಿದ್ದು, ಪೊಲೀಸ್ ಇಲಾಖೆಯವರು ಸೂಚಿಸಿದ ಕರ್ತವ್ಯಗಳನ್ನು ಅವರೊಂದಿಗೆ ಸಮನ್ವಯ ಸಾಧಿಸಿ, ಉತ್ತಮವಾಗಿ
ನಿರ್ವಹಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಎಂದರು.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗೃಹರಕ್ಷಕರ ಕೊಡುಗೆ ಅವಿಸ್ಮರಣೀಯ. ಕಾಪು ಬೀಚಿನಲ್ಲಿ ಡಾ. ಪ್ರಶಾಂತ ಶೆಟ್ಟಿಯವರ ನೇತೃತ್ವದಲ್ಲಿ ಉತ್ತಮ ಕೆಲಸ ನಿರ್ವಹಣೆ ತೋರುತ್ತಿದ್ದು, ಮಲ್ಪೆ ಬೀಚ್‌ನಲ್ಲಿ ಈಜು ಪರಿಣಿತಿ ಹೊಂದಿರುವ ಗೃಹ ರಕ್ಷಕ ಸಿಬ್ಬಂದಿಯವರನ್ನು ನೇಮಕ ಮಾಡಲಾಗಿದ್ದು, ಪ್ರವಾಸೋದ್ಯಮ ಕ್ಷೇತ್ರ ರಕ್ಷಣೆಯ ಜೊತೆಗೆ ಸಾರ್ವಜನಿಕರ ರಕ್ಷಣೆಯ ಜವಾಬ್ದಾರಿಯನ್ನು ಅರಿತು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಮಾತನಾಡಿ, ಗೃಹ ರಕ್ಷಕರು ಪೊಲೀಸ್ ಇಲಾಖೆಯ ಅವಿಭಾಜ್ಯ ಅಂಗವಾಗಿ ಕೆಲಸ ನಿರ್ವಹಿಸುತ್ತಿದ್ದು, ಗೃಹ ರಕ್ಷಕದಳದ ಸಿಬ್ಬಂದಿಗಳು ಸಮಾಜ ಮತ್ತು ನಾಗರಿಕರ ರಕ್ಷಣೆಗೆ ಬದ್ಧವಾಗಿದ್ದಾರೆ ಎಂದರು.
ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಗೃಹ ರಕ್ಷಕದಳದ ಸ್ವಯಂ ಸೇವಕರ ತ್ಯಾಗ
ಮೆಚ್ಚುವಂತದ್ದು. ಈ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇವರ ಕೊಡುಗೆ ಅಪಾರ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಕಮಾಂಡೆoಟ್ ಡಾ. ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 500 ಗೃಹ ರಕ್ಷಕರು ಕಾರ್ಯನಿರ್ವಹಿಸುತ್ತಿದ್ದು, ಉಡುಪಿ, ಮಣಿಪಾಲ, ಕಾಪು, ಪಡುಬಿದ್ರೆ, ಕಾರ್ಕಳ,
ಬ್ರಹ್ಮಾವರ, ಕುಂದಾಪುರ ಹಾಗೂ ಬೈಂದೂರು ಒಟ್ಟು 8 ಘಟಕಗಳಿವೆ. ಅಲ್ಲದೇ ಪ್ರವಾಸೋದ್ಯಮ ಇಲಾಖೆ, ಆರ್.ಟಿ.ಓ ಆಫೀಸ್, ಎನ್.ಸಿ.ಸಿ, ಕಾರಾಗೃಹದಲ್ಲಿ ಗೃಹರಕ್ಷಕ ದಳದವರು ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಧೈರ್ಯದಿಂದ ಕಾರ್ಯ ನಿರ್ವಹಿಸಿ, ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ ಎಂದರು.
ಗೃಹರಕ್ಷಕದಳ ದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು. ಇದೇ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಾದ ಪೊಲೀಸ್ ಅಧೀಕ್ಷಕರಾದ ಎನ್. ವಿಷ್ಣುವರ್ಧನ್, ಉಪಾಧೀಕ್ಷಕರಾದ ಜಯಶಂಕರ, ವೃತ್ತ ನಿರೀಕ್ಷಕರಾದ ಮಂಜುನಾಥ, ಕಾನ್ಸ್ಟೇಬಲ್ ಸಂತೋಷ್, ಜಿಲ್ಲಾ ಕಮಾಂಡೆ0ಟ್ ಡಾ. ಪ್ರಶಾಂತ ಶೆಟ್ಟಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ. ಕೃಷ್ಣ ಪ್ರಸಾದ್ ಕೂಡ್ಲು ಇವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಗೃಹ ರಕ್ಷಕದಳದ ಸೆಕೆಂಡ್ ಇನ್ ಕಮಾಂಡ್ ಕೆ.ಸಿ ರಾಜೇಶ್ ಸ್ವಾಗತಿಸಿದರು, ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ವಂದಿಸಿದರು, ಸಾಯಿನಾಥ್ ಉದ್ಯಾವರ ನಿರೂಪಿಸಿದರು.