ಬಜೆಟಿನಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು: ಸಿಎಂಗೆ ಎಸ್‌ಡಿಪಿಐ ಆಗ್ರಹ

ಉಡುಪಿ, ಮಾ.2: ಮುಖ್ಯಮಂತ್ರಿ ಸಿದ್ಧರಾಮಯ್ಯ ಮಂಡಿಸಲಿರುವ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಉಡುಪಿಗೆ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು, ಸುಸಜ್ಜಿತ ಜಿಲ್ಲಾಸ್ಪತ್ರೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ಉದ್ಘಾಟನೆ, ಬ್ರಹ್ಮಾವರದ ಕೃಷಿ ಅಧ್ಯಯನ ಕೇಂದ್ರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಘೋಷಣೆ ಯನ್ನು ಮಾಡಬೇಕು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ನ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಡಿಪಿಐ ರಾಜ್ಯಮಟ್ಟದಲ್ಲಿ ‘ಜನತಾ ಬಜೆಟ್’ ಮಾದರಿ ಬಜೆಟ್ ತಯಾರಿಸಿ ಬೆಂಗಳೂರಿನ ಫ್ರಿಡಂ ಪಾರ್ಕ್‌ನಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಸರಕಾರಕ್ಕೆ ಸಲ್ಲಿಸಿದೆ. ಇದರಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ದಲಿತರು, ರೈತರು, ಮಹಿಳೆಯರು, ಕಾರ್ಮಿಕರು ಮುಂತಾದ ಶೋಷಿತರ ಕಲ್ಯಾಣಕ್ಕೆ ಆದ್ಯತೆ ನೀಡಿತ್ತು. ಅದರಲ್ಲಿ ಹಕ್ಕೊತ್ತಾಯಗಳನ್ನು ಮಾಡಲಾಗಿತ್ತು ಎಂದವರು ನುಡಿದರು. ಅದರಂತೆ ಇದೀಗ ಉಡುಪಿ ಜಿಲ್ಲೆಯ ಬೇಡಿಕೆಗಳ ಪಟ್ಟಿಯನ್ನು ನೀಡಿದ ಅವರು 2026-27ನೇ ಸಾಲಿನ ಬಜೆಟ್‌ನಲ್ಲಿ ಪ್ರಮುಖ ಬೇಡಿಕೆಗಳನ್ನು ಪೂರೈಸಲು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜಿನ ಬೇಡಿಕೆ ಬಹುಕಾಲದ್ದು. ಇದಕ್ಕಾಗಿ ನಿವೇಶನವನ್ನು ಗುರುತಿಸಿ ದ್ದರೂ, ಕಾಲೇಜಿನ ಕನಸು ನನಸಾಗಿಲ್ಲ. ಸರಕಾರಿ ಕಾಲೇಜಿನಿಂದ ಬಡ ಹಾಗೂ ಮದ್ಯಮವರ್ಗದ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸಾಗುತ್ತದೆ. ಆದ್ದರಿಂದ ಈ ಬಾರಿಯ ಬಜೆಟ್‌ನಲ್ಲಾದರೂ ಸರಕಾರಿ ವೈದ್ಯಕೀಯ ಕಾಲೇಜಿನ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಅದೇ ರೀತಿ ಬಹುಕಾಲದಿಂದ ನಡೆಯುತ್ತಿರುವ ನಡೆಯುತ್ತಿರುವ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಿ ಸುಸಜ್ಜಿತ ಆಸ್ಪತ್ರೆ ಕಾರ್ಯಾರಂಭ ಮಾಡುವಂತೆ ಹಾಗೂ ತಾಲೂಕು ಸರಕಾರಿ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದರು.

ಜಿಲ್ಲೆಯ ಯುವ ಜನತೆಯ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಜಿಲ್ಲೆಯಲಿಲ ಐಟಿ ಹಬ್‌ನ ನಿರ್ಮಾಣ, ಕೈಗಾರಿಕಾ ಸಂಸ್ಥೆಗಳ ಸ್ಥಾಪನೆಗೆ ಮುಂದಾಗಬೇಕು, ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡ ಬೇಕು, ಹಾಜಿ ಅಬ್ದುಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ತಜ್ಞ ವೈದ್ಯರು ಹಾಗೂ ಅಗತ್ಯ ಸಿಬ್ಬಂದಿಗಳ ನೇಮಕವಾಗಬೇಕು ಎಂದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ಕೆಎಸ್ಸಾರ್ಟಿಸಿ ಬಸ್‌ಗಳನ್ನುಇ ನಿಯೋಜಿಸಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಬೇಕು, ಈ ಬಾರಿ ಅತ್ಯಧಿಕ ಮಳೆ ಹಾನಿಯಾಗಿದ್ದು, ಅದಕ್ಕೆ ಸೂಕ್ತ ಪರಿಹಾರ ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಹಿದ್ ಅಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ ವೈ.ಎಸ್., ಶಂಸುದ್ದೀನ್ ಉಡುಪಿ, ಉಪಾಧ್ಯಕ್ಷ ಹನೀಫ್ ಮುಳೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!