ನಾಗರಮಠ ಮರಳು ದಕ್ಕೆ: ಲೋಕಾಯುಕ್ತ ಸೂಚನೆ ಮೇರೆಗೆ ತಜ್ಞರ ಸಮಿತಿ ಪರಿಶೀಲನೆ

ಉಡುಪಿ ಮೇ 21: ಬಾರಕೂರು ಸಮೀಪದ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮರಳುಗಾರಿಕೆ ಕಾನೂನು ನಿಯಮಗಳನ್ನು ಮೀರಿ ಹಾಗೂ ಪರಿಸರಕ್ಕೆ ಧಕ್ಕೆ ಉಂಟುಮಾಡುವ ರೀತಿಯಲ್ಲಿ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆ, ಕರ್ನಾಟಕ ಲೋಕಾಯುಕ್ತದ ಸೂಚನೆ ಮೇರೆಗೆ ತಜ್ಞರ ಜಂಟಿ ಸಮಿತಿ ಸ್ಥಳ ಪರಿಶೀಲನೆ ನಡೆಸಿತು.

ಸ್ಥಳೀಯರಾದ ಗಣೇಶ್ ಶೆಟ್ಟಿ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ದೂರಿನ ಗಂಭೀರತೆಯನ್ನು ಪರಿಗಣಿಸಿದ ಲೋಕಾಯುಕ್ತರು ವಿವಿಧ ಇಲಾಖೆಗಳ ತಜ್ಞರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪರಿಶೀಲನೆ ನಡೆಸುವಂತೆ ಆದೇಶಿಸಿದ್ದರು. ಅದರಂತೆ ಮೇ 21ರಂದು ಸಮಿತಿ ದೋಣಿ ಮೂಲಕ ಮರಳುಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿ ವರದಿ ಸಿದ್ಧಪಡಿಸಿತು.

ಸಮಿತಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಡುಪಿ ವಿಭಾಗದ ಹಿರಿಯ ಪರಿಸರ ಅಧಿಕಾರಿಗಳು, ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಹಕ ಇಂಜಿನಿಯರ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸುರತ್ಕಲ್ ಇಂಜಿನಿಯರಿಂಗ್ ಕಾಲೇಜಿನ ಪರಿಸರ ಹಾಗೂ ಭೂವಿಜ್ಞಾನ ವಿಭಾಗದ ಮುಖ್ಯಸ್ಥರು, ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಲೋಕಾಯುಕ್ತ ಅಧಿಕಾರಿಗಳು ಭಾಗವಹಿಸಿದ್ದರು.

ಮರಳುಗಾರಿಕೆಯಲ್ಲಿ ನಡೆದಿರುವ ಅಕ್ರಮಗಳ ಸ್ವರೂಪ, ಪರಿಸರ ಹಾನಿ, ಪರಿಸರ ವ್ಯತ್ಯಯ ಹಾಗೂ ಸರ್ಕಾರದ ಖಜಾನೆಗೆ ಉಂಟಾದ ಆರ್ಥಿಕ ನಷ್ಟದ ಪ್ರಮಾಣವನ್ನು ಅಂದಾಜು ಮಾಡುವ ಉದ್ದೇಶದಿಂದ ಈ ಪರಿಶೀಲನೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ ಉಡುಪಿ ಲೋಕಾಯುಕ್ತ ಪೊಲೀಸರು ಏಪ್ರಿಲ್ 27ರಂದು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದ್ದರು. ತನಿಖೆ ವೇಳೆ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳು ನಡೆದಿರುವುದು ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ವಿವಿಧ ಇಲಾಖೆಗಳು ಸ್ವತಂತ್ರ ಪರಿಶೀಲನೆ ನಡೆಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಸಮಾಧಾನ ವ್ಯಕ್ತಪಡಿಸಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಜ್ಞರ ಸಮಿತಿಯಿಂದ ವರದಿ ನೀಡುವಂತೆ ಸೂಚಿಸಿತ್ತು.

ಪರಿಶೀಲನೆ ವೇಳೆ ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್, ವೃತ್ತ ನಿರೀಕ್ಷಕ ಮಂಜುನಾಥ್, ಎಡಿಎಲ್‌ಆರ್ ತಿಪ್ಪೆರಾಯ ತೊರವಿ, ಸಣ್ಣ ನೀರಾವರಿ ಇಲಾಖೆಯ ರಾಜುದ್ದೀನ್, ಅರಣ್ಯ ಇಲಾಖೆಯ ಶ್ರೀಧರ್, ಮಾಲಿನ್ಯ ನಿಯಂತ್ರಣ ಮಂಡಳಿಯ ಕೀರ್ತಿ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!