ನಾಳೆ 10 ಸಚಿವರೊಂದಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಸಂಜೆ 4.05ಕ್ಕೆ ಲೋಕಭವನದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಸಮಾರಂಭ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿದೆ.

ರಾಜ್ಯ ರಾಜಕೀಯ ವಲಯದಲ್ಲಿ ನಿರೀಕ್ಷೆ ಹೆಚ್ಚಿಸಿದ್ದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದ್ದು, ನಾಳೆ 10 ಸಚಿವರೊಂದಿಗೆ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಟೈಮ್ಸ್‌ಗೆ ದೊರಕಿದ ಖಚಿತ ಮಾಹಿತಿಯ ಪ್ರಕಾರ, ಕೆ.ಜಿ. ಜಾರ್ಜ್, ಡಾ.ಜಿ.ಪರಮೇಶ್ವರ್, ರಾಮಲಿಂಗ ರೆಡ್ಡಿ, ಕೃಷ್ಣ ಬೈರೇಗೌಡ, ಯು.ಟಿ. ಖಾದರ್, ಎಂ.ಬಿ. ಪಾಟೀಲ, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಯತೀಂದ್ರ ಸಿದ್ದರಾಮಯ್ಯ ಹಾಗೂ ಕೆ.ಎಚ್. ಮುನಿಯಪ್ಪ ಅವರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಚಿವ ಸಂಪುಟದ ಜವಾಬ್ದಾರಿಗಳು ಮತ್ತು ಇಲಾಖೆಗಳ ಹಂಚಿಕೆ ಸಂಬಂಧ ಅಧಿಕೃತ ಘೋಷಣೆ ಇನ್ನಷ್ಟೇ ಹೊರಬರುವ ನಿರೀಕ್ಷೆಯಿದ್ದು, ಪ್ರಮಾಣವಚನ ಸಮಾರಂಭದ ಬಳಿಕ ಮುಂದಿನ ರಾಜಕೀಯ ಚಟುವಟಿಕೆಗಳು ಮತ್ತಷ್ಟು ವೇಗ ಪಡೆಯುವ ಸಾಧ್ಯತೆ ಇದೆ.

ಸ್ವಾಮೀಜಿ, ಫಾದರ್, ಮೌಲ್ವಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ- ರಾಜ್ಯದ ಇತಿಹಾಸದಲ್ಲೇ ಮೊದಲು!

ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಡಿಕೆ ಶಿವಕುಮಾರ್ ಅವರು, ಸ್ವಾಮೀಜಿ, ಫಾದರ್ ಹಾಗೂ ಮೌಲ್ವಿ ಸೇರಿದಂತೆ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.

ಇದುವರೆಗೂ ರಾಜ್ಯದಲ್ಲಿ ಯಾವುದೇ ನಾಯಕ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಈ ಸಂಬಂಧ ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಡಿಕೆಶಿ ಮುಂದಾಗಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!