ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮಣಿಪಾಲದಲ್ಲಿ ರಸ್ತೆಗಿಳಿದು ಪ್ರತಿಭಟಿಸಿದ ವಿದ್ಯಾರ್ಥಿಗಳು

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮಣಿಪಾಲದಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಮಣಿಪಾಲ ಕಾಯಿನ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿದ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವಿರುದ್ಧ ಘೋಷಣೆಗಳನ್ನು ಕೂಗಿದರು. ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಕರಪತ್ರಗಳನ್ನು ಪ್ರದರ್ಶಿಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಘಟನೆಯಿಂದ ಜೀವ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೋಹನ್ ಮಚದೋ ಮಾತನಾಡಿ, “ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು. ವಿದ್ಯಾರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಗಳಿಂದ ಅವರ ಭವಿಷ್ಯಕ್ಕೆ ಧಕ್ಕೆ ಉಂಟಾಗಿದೆ. ಈ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ವಿದ್ಯಾರ್ಥಿ ನಾಯಕಿ ಜೂನ್ ಮೆಹತಿ ಕೊಲ್ಕತ್ತಾ ಮಾತನಾಡಿದರು.
ಪ್ರತಿಭಟನೆಯಲ್ಲಿ ಸಹಬಾಳ್ವೆ ಅಧ್ಯಕ್ಷ ಪ್ರೊ. ಕೆ.ಫಣಿರಾಜ್, ವಿಶ್ವಾಸ್ ಅಮೀನ್, ದಲಿತ ಸಂಘರ್ಷ ಸಮಿತಿಯ ಶ್ಯಾಮ್‌ರಾಜ್ ಬಿರ್ತಿ, ಪ್ರಶಾಂತ್ ಬಿರ್ತಿ, ಪ್ರಕಾಶ್ ಹೇರೂರು ಹಾಗೂ ಎಸ್‌ಐಒ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಮತ್ತು ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!