ಉಡುಪಿ: ಕಾಂಗ್ರೆಸ್ ಬಲವರ್ಧನೆಗೆ ಎಸ್‌ಎಸ್‌ಎ ಅಭಿಯಾನ- ಹಿಮ್ಮತ್‌ಸಿಂಗ್

ಆಗಸ್ಟ್ ಅಂತ್ಯದೊಳಗೆ ನೂತನ ಜಿಲ್ಲಾಧ್ಯಕ್ಷರ ಆಯ್ಕೆ

ಉಡುಪಿ: ದೇಶಾದ್ಯಂತ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸಂಘಟನಾ ಸೃಜನಾ ಅಭಿಯಾನ (ಎಸ್‌ಎಸ್‌ಎ) ಆರಂಭಿಸಲಾಗಿದ್ದು, ಅದರ ಭಾಗವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಜಿಲ್ಲೆಯ ಪ್ರಮುಖರ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಎಐಸಿಸಿ ವೀಕ್ಷಕ ಹಿಮ್ಮತ್‌ಸಿಂಗ್ ಪ್ರಹ್ಲಾದ್‌ಸಿಂಗ್ ಪಟೇಲ್ ತಿಳಿಸಿದರು.

ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಜರಾತ್‌ನಲ್ಲಿ ನಡೆದ ಎಐಸಿಸಿ ಸಭೆಯ ತೀರ್ಮಾನದಂತೆ ದೇಶವ್ಯಾಪಿ ಪಕ್ಷ ಸಂಘಟನೆಯನ್ನು ಬಲಪಡಿಸಲು ಹೊಸ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಜಿಲ್ಲೆಯ ಮಾಜಿ ಶಾಸಕರು, ಸಚಿವರು, ಸಂಸದರು, ಚುನಾಯಿತ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹಿಸಿ, ಅರ್ಹ ಆರು ಮಂದಿಯ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಯುವ ನಾಯಕತ್ವಕ್ಕೆ ಆದ್ಯತೆ ನೀಡಿ ಪಕ್ಷಕ್ಕೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದದ್ದಲ್ಲ, ಪಕ್ಷ ಸಂಘಟನೆಯನ್ನು ಬಲಪಡಿಸುವ ಪ್ರಯತ್ನವಾಗಿದೆ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಹಾಗೂ ಹತ್ತು ಬ್ಲಾಕ್‌ಗಳಿಗೆ ಭೇಟಿ ನೀಡಿ ಒಂದು ವಾರದೊಳಗೆ ಅಭಿಪ್ರಾಯ ಸಂಗ್ರಹಿಸಲಾಗುವುದು. ಅಂತಿಮ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಮಹಿಳೆಯರಿಗೆ ಸಾಮಾಜಿಕ ನ್ಯಾಯದ ಆಧಾರದಲ್ಲಿ ಆದ್ಯತೆ ನೀಡಲಾಗುವುದು. ಹೈಕಮಾಂಡ್ ಪರಿಶೀಲನೆಯ ಬಳಿಕ ಆಗಸ್ಟ್ ಅಂತ್ಯದೊಳಗೆ ಜಿಲ್ಲಾಧ್ಯಕ್ಷರ ಹೆಸರನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮಾತನಾಡಿ, ಜುಲೈ 30ರವರೆಗೆ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಎಐಸಿಸಿಗೆ ಸಲ್ಲಿಸಲಾಗುವುದು. ಪಕ್ಷ ಸಂಘಟನೆಗೆ ಆದ್ಯತೆ ನೀಡುವ ನಾಯಕತ್ವವನ್ನು ಬೆಳೆಸುವ ಉದ್ದೇಶ ಈ ಅಭಿಯಾನಕ್ಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಭಿಯಾನದ ಉಸ್ತುವಾರಿ ಶಾಲೆಟ್ ಪಿಂಟೋ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!