ವಿದ್ಯಾರ್ಥಿಗಳ ಅವಹೇಳನ ಮತ್ತು ದ್ವೇಷ ಭಾಷಣ: ಶಾಸಕ ಯಶ್‌ಪಾಲ್ ವಿರುದ್ಧ ದೂರು ದಾಖಲು
ಉಡುಪಿ, ಜು. 29: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಮಂಗಳವಾರ ಉಡುಪಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯ ವೇಳೆ ನೀಡಲಾದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್ ಹಾಗೂ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಮಂಗಳವಾರ ಮಧ್ಯರಾತ್ರಿ ಉಡುಪಿ ನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದು, ಅದರ ಆಧಾರದಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್‌ರಾಜ್ ಕಾಂಚನ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರವೇ ತನ್ನ ವೈಫಲ್ಯವನ್ನು ಒಪ್ಪಿಕೊಂಡಿದ್ದು, ಅದಕ್ಕಾಗಿ ಸಂಸತ್ತಿನಲ್ಲಿ ಕಠಿಣ ಕಾನೂನು ಜಾರಿಗೆ ತಂದಿದೆ. ಇಂತಹ ಸಂದರ್ಭದಲ್ಲಿ ಆಡಳಿತ ಪಕ್ಷವಾದ ಬಿಜೆಪಿ ಉಡುಪಿಯಲ್ಲಿ ಪ್ರತಿಭಟನೆ ನಡೆಸಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಹಾಸ್ಯ ಎಂದು ಆರೋಪಿಸಿದರು.
ಇದೇ ವೇಳೆ, ಪ್ರತಿಭಟನೆಯ ಸಂದರ್ಭ ನ್ಯಾಯಕ್ಕಾಗಿ ಹೋರಾಡಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವಹೇಳನಕಾರಿ ಹಾಗೂ ದ್ವೇಷ ಭಾಷಣ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧವೂ ಅವಮಾನಕಾರಿ ಹೇಳಿಕೆಗಳನ್ನು ನೀಡಲಾಗಿದೆ ಎಂದು ದೂರಿದರು.
ಈ ಹೇಳಿಕೆಗಳು ವಿದ್ಯಾರ್ಥಿ ಸಮುದಾಯದ ಗೌರವಕ್ಕೆ ಧಕ್ಕೆ ಉಂಟುಮಾಡುವುದರ ಜೊತೆಗೆ ಸಮಾಜದಲ್ಲಿ ದ್ವೇಷ ಹರಡುವಂತಿವೆ ಎಂದು ಆರೋಪಿಸಿರುವ ಕಾಂಗ್ರೆಸ್, ಸಂಬಂಧಿತ ಭಾಷಣಗಳ ವಿಡಿಯೋ ಸಾಕ್ಷ್ಯಗಳೊಂದಿಗೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದೆ.
ಪ್ರಕರಣದಲ್ಲಿ ನ್ಯಾಯ ದೊರೆಯುವವರೆಗೆ ಕಾನೂನು ಹೋರಾಟವನ್ನು ಮುಂದುವರಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಪೊಲೀಸರು ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ





