ಉಡುಪಿ: ಖರ್ಗೆ ಭಾಷಣದ ವೇದಿಕೆ ಶುದ್ಧೀಕರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ಉತ್ತರಾಖಂಡದ ಹಲ್ದವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆಯನ್ನು ಗಂಗಾಜಲ ಸಿಂಪಡಿಸಿ, ಹೋಮ ನಡೆಸಿ ‘ಶುದ್ಧೀಕರಣ’ ಮಾಡಿರುವ ಘಟನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.
ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು, ಬಿಜೆಪಿ ಪಕ್ಷದ ಸಂವಿಧಾನ ವಿರೋಧಿ ಧೋರಣೆಯನ್ನು ಖಂಡಿಸಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಅಶೋಕ್ ಪೂಜಾರಿ, ಜ್ಯೋತಿ ಹೆಬ್ಬಾರ್ ಹಾಗೂ ಗೀತಾ ವಾಗ್ಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.





