ಪ್ರಧಾನಿ ಮೋದಿ ನಾಯಕತ್ವ ಮೆಚ್ಚಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಮುಖಂಡರು
ಉಡುಪಿ: ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಐದು ಬಾರಿ ಚಾಂತಾರು ಗ್ರಾಮ ಪಂಚಾಯತ್‌ನ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ, ಒಂದು ಬಾರಿ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮಹೇಶ್ ಮೊಯ್ಲಿ ಬ್ರಹ್ಮಾವರ ಮತ್ತು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ಉಪ್ಪೂರು ಗ್ರಾಮ ಪಂಚಾಯತ್ ನಲ್ಲಿ ಎರಡು ಬಾರಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ, ಒಂದು ಬಾರಿ ಪಕ್ಷೇತರ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪ್ರಕಾಶ್ ದೇವಾಡಿಗ ಉಪ್ಪೂರು ಹಾಗೂ ಉದ್ಯಮಿ ಅರುಣ್ ಪೂಜಾರಿ ಉಪ್ಪೂರು ಅವರು ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಭಿವೃದ್ಧಿ ಪರ, ಜನಪರ ಆಡಳಿತದ ಕಾರ್ಯ ವೈಖರಿಯನ್ನು ಮೆಚ್ಚಿಕೊಂಡು ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.


ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಪಕ್ಷದ ಪ್ರಮುಖರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಗೆ ಅಧಿಕೃತವಾಗಿ ಸೇರ್ಪಡೆಗೊಂಡ ನೂತನ ಸದಸ್ಯರನ್ನು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್ ಕುಲಾಲ್, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರತಾಪ್ ಹೆಗ್ಡೆ ಮಾರಾಳಿ ಉಪಸ್ಥಿತರಿದ್ದರು.





