ಕಾಪು: ದನ ಕಳ್ಳತನ ಪ್ರಕರಣ- 24 ಗಂಟೆಯೊಳಗೆ ನಾಲ್ವರು ಆರೋಪಿಗಳ ಹೆಡೆಮುರಿಕಟ್ಟಿದ ಪೊಲೀಸರು

ಕಾಪು: ಮೇಯಲು ಬಿಟ್ಟಿದ್ದ ದನವನ್ನು ಟೆಂಪೋದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವಾ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ್ದ ಟೆಂಪೋ ಹಾಗೂ ದನವನ್ನು ವಶಪಡಿಸಿಕೊಂಡಿದ್ದಾರೆ.

ಸೆ.19ರಂದು ಸಂಜೆ 4 ಗಂಟೆ ಸುಮಾರಿಗೆ ಕಾಪು ತಾಲೂಕು ಕಳತ್ತೂರು ಗ್ರಾಮದ ನಡಿಗುತ್ತು ಎಂಬಲ್ಲಿ ವಸಂತಿ ಸುನೀತಾ ಕ್ವಾಡ್ರಸ್ ಅವರು ಮೇಯಲು ಬಿಟ್ಟಿದ್ದ ಐದು ದನಗಳ ಪೈಕಿ ಸುಮಾರು ಎರಡು ವರ್ಷ ಪ್ರಾಯದ ಕಪ್ಪು ಬಣ್ಣದ ಒಂದು ದನ ಕಾಣೆಯಾಗಿತ್ತು. ಹುಡುಕಾಟ ನಡೆಸಿದಾಗ ಸಮೀಪದಲ್ಲಿ ನಿಂತಿದ್ದ KA-19-B-5641 ನೋಂದಣಿ ಸಂಖ್ಯೆಯ ಟೆಂಪೋದಲ್ಲಿ ಕಾಣೆಯಾಗಿದ್ದ ದನದ ಜೊತೆಗೆ ಮತ್ತೊಂದು ದನವೂ ಇರುವುದು ಕಂಡುಬಂದಿದೆ. ಎರಡೂ ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರುದಾರರು ಟೆಂಪೋ ಬಳಿ ತೆರಳಿದಾಗ, ಉಮ್ಮರಬ್ಬ ಸೇರಿದಂತೆ ನಾಲ್ವರು ವ್ಯಕ್ತಿಗಳು ಅಲ್ಲಿರುವುದು ಕಂಡುಬಂದಿದ್ದು, ದೂರುದಾರರನ್ನು ನೋಡಿದ ಕೂಡಲೇ ಟೆಂಪೋವನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ವಸಂತಿ ಸುನೀತಾ ಕ್ವಾಡ್ರಸ್ ನೀಡಿದ ದೂರಿನ ಮೇರೆಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ಪ್ರಕರಣದ ಮೊದಲ ಆರೋಪಿ ಉಮ್ಮರಬ್ಬ (64), ತಂದೆ ದಿವಂಗತ ಶೇಖಬ್ಬ, ಕಳತ್ತೂರು ಗ್ರಾಮ, ಕಾಪು ತಾಲೂಕು ಎಂಬಾತನನ್ನು ಸೆ.19ರಂದು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ತಲೆಮರೆಸಿಕೊಂಡಿದ್ದ ಆರೋಪಿಗಳಾದ ಮೊಹಮ್ಮದ್ ಶರೀಫ್ (31), ಶಂಶುದ್ದೀನ್ (57) ಹಾಗೂ ಮಹಮ್ಮದ್ ಆಸೀರ್ (24) ಅವರನ್ನು ಸೆ.20ರಂದು ಕಾಪುವಿನ ಕೊಪ್ಪಲಂಗಡಿ ಎಂಬಲ್ಲಿ ವಾಹನ ಸಮೇತ ಪತ್ತೆಹಚ್ಚಿ ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ KA-19-B-5641 ಸಂಖ್ಯೆಯ ಟೆಂಪೋ ಹಾಗೂ ದನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಕಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಇಶಿತಾ ಗುಪ್ತ ಹಾಗೂ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಅಝಮತ್ ಆಲಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಶಿರ್ವಾ ಠಾಣಾ ಉಪನಿರೀಕ್ಷಕ ಮಂಜುನಾಥ ಮರಬದ, ಪಡುಬಿದ್ರಿ ಠಾಣಾ ಉಪನಿರೀಕ್ಷಕ ಶಕ್ತಿವೇಲು. ಇ, ಅನಿಲ್ ಕುಮಾರ್ ಟಿ.ನಾಯ್ಕ್, ಹೆಬ್ರಿ ಠಾಣಾ ಉಪನಿರೀಕ್ಷಕ ಲೋಹಿತ್ ಕುಮಾರ್ ಸೇರಿದಂತೆ ಶಿರ್ವಾ, ಕಾಪು ಮತ್ತು ಪಡುಬಿದ್ರಿ ಠಾಣೆಗಳ ಪೊಲೀಸ್ ಸಿಬ್ಬಂದಿ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯ ಸಿ.ಡಿ.ಆರ್. ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!