ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ವಿಶೇಷ ತನಿಖಾ ತಂಡ (SIT) ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿರುವುದಾಗಿ ತಿಳಿದು ಬಂದಿದೆ.
ಪ್ರಕರಣ ನಡೆದು 14 ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ ಹಾಗೂ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಎಂಬಾತನನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು.
ಖುಲಾಸೆ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಬೇಡಿಕೆ ಮುನ್ನೆಲೆಗೆ ಬಂದಿತ್ತು. ಸೌಜನ್ಯಾಳ ಕುಟುಂಬವೂ ಮರುತನಿಖೆಗೆ ಆಗ್ರಹಿಸಿತ್ತು. 2024ರಲ್ಲಿ ಕರ್ನಾಟಕ ಹೈಕೋರ್ಟ್ನಲ್ಲಿ ಮರುತನಿಖೆ ಕೋರಿ ಸಲ್ಲಿಸಿದ್ದರು.
ಈ ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರ ವಿರುದ್ಧ ಅವರು 2026ರಲ್ಲಿ ಸುಪ್ರೀಂ ಕೋರ್ಟ್ ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಮರುತನಿಖೆ ನಡೆಸುವ ವಿಧಾನ ಮತ್ತು ಯಾವ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕು ಎಂಬ ವಿಚಾರದಲ್ಲಿ ವಾದ-ಪ್ರತಿವಾದಗಳು ನಡೆದಿದ್ದವು. ರಾಜ್ಯ ಸರಕಾರವೂ ಅಗತ್ಯವಿದ್ದಲ್ಲಿ SIT ರಚಿಸಲು ಸಿದ್ಧವಿರುವುದಾಗಿಯೂ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು.
ಇದೀಗ ಸುಪ್ರೀಂ ಕೋರ್ಟ್ SIT ಮೂಲಕ ಈ ಪ್ರಕರಣದ ಮರುತನಿಖೆಗೆ ಅವಕಾಶ ನೀಡಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿರುವುದು ಪ್ರಕರಣದಲ್ಲಿ ಮಹತ್ವದ ತಿರುವಾಗಿದೆ. ತನಿಖೆಯ ಬಳಿಕ ಸೌಜನ್ಯಾ ಪ್ರಕರಣದ ನೈಜ ಘಟನೆಗಳ ಕುರಿತು ಯಾವ ಅಂಶಗಳು ಬೆಳಕಿಗೆ ಬರುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.





