ನ.5ರೊಳಗೆ ಉಡುಪಿ ಜಿಲ್ಲಾಸ್ಪತ್ರೆ ಆರಂಭಕ್ಕೆ ಗಡುವು: ಕರವೇ

ಉಡುಪಿ: ಅಜ್ಜರಕಾಡಿನಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಸ್ಪತ್ರೆಯನ್ನು ಶೀಘ್ರ ರೋಗಿಗಳ ಸೇವೆಗೆ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ನಡೆಸಿದ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹವನ್ನು ಜಿಲ್ಲಾಡಳಿತ ನೀಡಿದ ಭರವಸೆ ಹಿನ್ನೆಲೆಯಲ್ಲಿ ಅಂತ್ಯಗೊಳಿಸಲಾಯಿತು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರವೇ (ಪ್ರವೀಣ್ ಶೆಟ್ಟಿ ಬಣ) ರಾಜ್ಯ ಸಂಚಾಲಕ ಪ್ರಸನ್ನ ಶೆಟ್ಟಿ ಅವರು, ಹೋರಾಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತವು ಅ.5ರಂದು ಅಪರ ಜಿಲ್ಲಾಧಿಕಾರಿಯನ್ನು ಪ್ರತಿಭಟನಾ ಸ್ಥಳಕ್ಕೆ ಕಳುಹಿಸಿ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಮನವಿ ಮಾಡಿತು.

ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣ ಅಳವಡಿಸುವ ಕಾರ್ಯ ಅ.6ರಿಂದಲೇ ಆರಂಭಿಸಲಾಗುವುದು. ನ.5ರೊಳಗೆ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಆಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದರು.

ಜಿಲ್ಲಾಡಳಿತ ನೀಡಿರುವ ಗಡುವಿನೊಳಗೆ ನೂತನ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಆರಂಭವಾಗದಿದ್ದರೆ ನ.6 ರಿಂದ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈಗ ಕಾರ್ಯಾಚರಿಸುತ್ತಿರುವ ಆಸ್ಪತ್ರೆಯಲ್ಲಿ ಸುಸಜ್ಜಿತ ಯಂತ್ರೋಪಕರಣಗಳ ವ್ಯವಸ್ಥೆ ಇಲ್ಲ. ನೂತನ ಜಿಲ್ಲಾಸ್ಪತ್ರೆಯಲ್ಲಿ ಬಡ ಹಾಗೂ ಮಧ್ಯಮ ವರ್ಗದ ರೋಗಿಗಳಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಿ, ಆಧುನಿಕ ತಂತ್ರಜ್ಞಾನ ಆಧಾರಿತ ಯಂತ್ರೋಪಕರಣಗಳನ್ನು ಅಳವಡಿಸಿ ಆಸ್ಪತ್ರೆಯನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕರವೇ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಅಧ್ಯಕ್ಷ ಸುಧೀರ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಸುಮಾ ಅಂಚನ್, ಸಂಚಾಲಕಿ ದೇವಕಿ ಬಾರ್ಕೂರು, ಸೈಯದ್ ನಿಜಾಮ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!