ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ: ಅ.31ರಂದು ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಉಡುಪಿ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ಸ್ನೇಹ ಸಮಾವೇಶ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಅ.31ರಂದು ಸಂಜೆ 6.30ಕ್ಕೆ ಉಡುಪಿ ಮಿಷನ್ ಕಂಪೌಂಡ್‌ನ ಯುಬಿಎಂಸಿ ಆಡಿಟೋರಿಯಂನಲ್ಲಿ ನಡೆಯಲಿದೆ.

ರಾಜ್ಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಪ್ರಶಸ್ತಿ ಪ್ರದಾನ ಮಾಡಲಿರುವರು. ಕಾರ್ಯಕ್ರಮವನ್ನು ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಉದ್ಘಾಟಿಸಲಿರುವರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಮೌಲಾ ವಹಿಸಲಿರುವರು. ಕರ್ನಾಟಕ ರಾಜ್ಯ ಮುಸ್ಲಿಮ್ ಒಕ್ಕೂಟದ ಸಂಚಾಲಕ ಮುಹಮ್ಮದ್ ಯಾಸೀನ್ ಮಲ್ಪೆ ಆಶಯ ಮತ್ತು ಅಭಿನಂದನಾ ಭಾಷಣ ಮಾಡಲಿರುವರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ, ನಟ ಪ್ರಕಾಶ್ ರಾಜ್ ಅವರಿಗೆ ‘ಮಾನವ ರತ್ನ’, ದುಬೈಯ ಉದ್ಯಮಿ ಹಿದಾಯತುಲ್ಲಾ ಅಬ್ಬಾಸ್ ಅವರಿಗೆ ‘ಸೇವಾ ರತ್ನ’, ಬರಹಗಾರ ಮತ್ತು ಸಾಮಾಜಿಕ ಹೋರಾಟಗಾರ ಸುರೇಶ್ ಭಟ್ ಬಾಕ್ರಬೈಲ್ ಅವರಿಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇವರಿಗೆ ಪ್ರಶಸ್ತಿ ಫಲಕದ ಜೊತೆ ತಲಾ ೫೦ಸಾವಿರ ನಗದು ಪುರಸ್ಕಾರ ನೀಡಲಾಗುವುದು.

ಅದೇ ರೀತಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಮಾಜಿಕ ಕಾರ್ಯಕರ್ತರುಗಳಾದ ಇಬ್ರಾಹಿಂ ಸಾಹೇಬ್ ಹಂಗಾರಕಟ್ಟೆ, ಬಿಪಿನ್ ಚಂದ್ರಪಾಲ್ ಕಾರ್ಕಳ, ಜೆರಾಲ್ಡ್ ಪಿಂಟೋ ಉಡುಪಿ, ಚಂದ್ರಶೇಖರ್ ಶೆಟ್ಟಿ ಕುಂದಾಪುರ,ಸಾಮಾಜಿಕ ಹೋರಾಟಗಾರ್ತಿ ಗೀತಾ ಸುರೇಶ್ ಕುಮಾರ್ ಬೈಂದೂರು, ಲೇಖಕಿ ಫಾತಿಮಾ ರಲಿಯಾ ಹೆಜಮಾಡಿ ಅವರನ್ನು ಸನ್ಮಾನಿಸಲಾಗುವುದು.

ಅತಿಥಿಗಳಾಗಿ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‌ನ ಮುಖ್ಯ ಜಿಲ್ಲಾ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ, ದ.ಕ.- ಉಡುಪಿ ಜಿಲ್ಲಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಗೌರವಾಧ್ಯಕ್ಷ ದಿವಾಕರ ಸನಿಲ್, ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಉಡುಪಿ ಸಹಬಾಳ್ವೆ ಸಂಚಾಲಕ ಪ್ರೊ.ಫಣಿರಾಜ್, ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ್, ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಕೆ.ಅಶ್ರಫ್, ತೀರ್ಥಹಳ್ಳಿ ಮುಸ್ಲಿಂ ಒಕ್ಕೂಟದ ಹಾಜಿ ಸುಲೈಮಾನ್ ಸಾಹೇಬ್, ನಾರ್ತ್ ಕೆನರಾ ಮುಸ್ಲಿಂ ಯುನೈಟೆಡ್ ಫೋರಂನ ಇಮ್ತಿಯಾಝ್ ಅಹ್ಮದ್ ಉಮರ್ ಶೇಖ್ ಭಾಗವಹಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!