ಕಾಂಗ್ರೆಸ್ ಕಾರ್ಯಕರ್ತರನ್ನು ಮುಟ್ಟುವ ತಾಕತ್ತು ಬಿಜೆಪಿಯವರಿಗೆ ಇದೆಯೇ?- ಸುರೇಶ್ ಶೆಟ್ಟಿ ಬನ್ನಂಜೆ ಸವಾಲು
ಉಡುಪಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ತುಂಡರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುವ ತಾಕತ್ತು ಬಿಜೆಪಿಯ ಯಾರಿಗಾದರೂ ಇದೆಯೇ ಎಂಬುದನ್ನು ತಿಳಿದುಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ ಅವರು ಛಲವಾದಿ ನಾರಾಯಣಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬಿಲದಲ್ಲಿ ಕುಳಿತುಕೊಂಡು ಕಾಂಗ್ರೆಸ್ ಪಕ್ಷವನ್ನು ಟೀಕಿಸುವುದನ್ನು ಬಿಟ್ಟು, ಮೊದಲು ತಮ್ಮ ನೈತಿಕತೆಯನ್ನು ಪ್ರಶ್ನಿಸಿಕೊಳ್ಳಲಿ.ಕಾಂಗ್ರೆಸ್ ಕಾರ್ಯಕರ್ತರನ್ನು ತುಂಡರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುವುದಾಗಿ ಬೆದರಿಕೆ ಹಾಕುವ ಮಾತುಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ. ಇಂತಹ ಬೆದರಿಕೆಗಳಿಗೆ ಹೆದರಿ ಕುಳಿತುಕೊಳ್ಳುವುದು ಕಾಂಗ್ರೆಸ್ಸಿಗರ ಜಾಯಮಾನವಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮಗೆ ನಿಜವಾಗಿಯೂ ತಾಕತ್ತಿದ್ದರೆ ಇದೇ ನವೆಂಬರ್ 5ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಡೆಯಲಿರುವ ಜಿಲ್ಲಾ ಮಟ್ಟದ ಪ್ರತಿಭಟನೆಗೆ ನಿಮ್ಮ ಕಾರ್ಯಕರ್ತರನ್ನು ಕರೆದುಕೊಂಡು ಬನ್ನಿ. ಕಾಂಗ್ರೆಸ್ ಕಾರ್ಯಕರ್ತರನ್ನು ಅರಬ್ಬಿ ಸಮುದ್ರಕ್ಕೆ ಎಸೆಯುವ ನಿಮ್ಮ ಸವಾಲನ್ನು ಅಲ್ಲಿ ಪ್ರದರ್ಶಿಸಿ ಎಂದು ಸುರೇಶ್ ಶೆಟ್ಟಿ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ಕುಟುಂಬಗಳ ಹಿನ್ನೆಲೆಯುಳ್ಳವರು. ಅಂತಹ ಕಾರ್ಯಕರ್ತರು ಯಾವುದೇ ಬೆದರಿಕೆಗೂ ಜಗ್ಗುವುದಿಲ್ಲ. ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ಬಿಜೆಪಿಯನ್ನು ರಾಜಕೀಯವಾಗಿ ಎದುರಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ. ಮತಗಳ್ಳತನದ ಆರೋಪಗಳ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜೀನಾಮೆ ನೀಡಬೇಕೆಂಬ ಕಾಂಗ್ರೆಸ್‌ನ ಆಗ್ರಹ ಮುಂದಿನ ದಿನಗಳಲ್ಲಿಯೂ ಮುಂದುವರಿಯಲಿದೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.





