ಜೆಡಿಎಸ್ – ಬಿಜೆಪಿ ವಿಲೀನ: ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಜಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಯವರು ವಿಧಾನ ಪರಿಷತ್ ಸಭಾಪತಿಗಳ ವಿಚಾರದಲ್ಲಿ ನಮ್ಮ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದರೆ ಯಾವುದೇ ಜೆ.ಡಿ.ಎಸ್. ಶಾಸಕರು ಭಾರತೀಯ ಜನತಾ ಪಕ್ಷಕ್ಕೆ ಬರುವುದಾಗಲೀ ಅಥವಾ ಜೆ.ಡಿ.ಎಸ್. ಪಕ್ಷವನ್ನು ಭಾರತೀಯ ಜನತಾ ಪಕ್ಷದಲ್ಲಿ ವಿಲೀನಗೊಳಿಸುವಂತಹ ಗೊಂದಲದ ವರದಿಗಳು ಶುದ್ಧ ಸುಳ್ಳು. ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಿಎಂ, ಕೇವಲ ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ನಮಗೆ ಸಹಕಾರ ನೀಡುತ್ತಿದ್ದಾರೆಯೇ ವಿನಃ ಮತ್ತೇನೂ ಇಲ್ಲ. ಗೋಹತ್ಯೆ ನಿಷೇಧದ ಬಗ್ಗೆ ನಮ್ಮ ಬೆಂಬಲವಿಲ್ಲ ಎಂದು ಸಹ ಕುಮಾರಸ್ವಾಮಿ ಸ್ಪಷ್ಟವಾಗಿ ಹೇಳಿದ್ದರಿಂದ ನಾವು ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿಗೆ ತರುತ್ತಿದ್ದೇವೆ ಎಂದಿದ್ದಾರೆ.

ಇನ್ನು ವಿಧಾನಸಭೆಗೆ ಚುನಾವಣೆ ಇನ್ನೂ ಎರಡೂವರೆ ವರ್ಷ ಇದೆ. ಈಗ ಮಾಧ್ಯಮಗಳಲ್ಲಿ ಬರುತ್ತಿರುವ ಬಿಜೆಪಿ ಜತೆ ಜೆಡಿಎಸ್ ವಿಲೀನ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಬಗ್ಗೆ ಹೆಚ್ಚಿನ ಒಲವು ತೋರಿಸುತ್ತಿರುವ ಕಾರಣ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಸುದ್ದಿಗಳಿಗೆ ಸಿಎಂ ಯಡಿಯೂರಪ್ಪ ತೆರೆ ಎಳೆಯುವ ಯತ್ನ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!