ಪ್ರದೀಪ್ ಪೂಜಾರಿ ಪ್ರಕರಣ: ಸಿಐಡಿಗೆ ವರ್ಗಾವಣೆ

ಡಿಜಿ-ಐಜಿಪಿ ಆದೇಶದ ಮೇರೆಗೆ ತಕ್ಷಣದಿಂದಲೇ ಜಾರಿ- ಎಸ್ಪಿ ಹರಿರಾಮ್ ಶಂಕರ್ ಮಾಹಿತಿ

ಉಡುಪಿ, ನ.9:ಹಿರಿಯಡ್ಕದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವರ್ಗಾಯಿಸಿ ಪೊಲೀಸ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಾದ (DG&IGP) ಆದೇಶದ ಮೇರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂರು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆ, ಹಿರಿಯಡ್ಕ ಪೊಲೀಸ್ ಠಾಣೆ ಹಾಗೂ ಉಡುಪಿ ನಗರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳು ಸಿಐಡಿ ತನಿಖೆಗೆ ವರ್ಗಾವಣೆಯಾಗಿವೆ.

ಮೂರು ಪ್ರಕರಣಗಳು ಯಾವುವು?

  1. ಉಡುಪಿ ಮಹಿಳಾ ಪೊಲೀಸ್ ಠಾಣೆ: ಕ್ರೈಂ ನಂ. 67/2026. ಅಕ್ಟೋಬರ್ 27ರಂದು ಶ್ರಾವ್ಯ ಶೆಟ್ಟಿ ನೀಡಿದ ದೂರಿನ ಆಧಾರದಲ್ಲಿ ದಾಖಲಾಗಿರುವ ಪ್ರಕರಣ.
  2. ಹಿರಿಯಡ್ಕ ಪೊಲೀಸ್ ಠಾಣೆ: ಕ್ರೈಂ ನಂ. 62/2026. ಪ್ರದೀಪ್ ಪೂಜಾರಿ ಅವರ ಸಹೋದರ ದಿಲೀಪ್ ನೀಡಿದ ದೂರಿನ ಮೇರೆಗೆ ಅಪಹರಣ ಮತ್ತು ಹಲ್ಲೆ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ.
  3. ಉಡುಪಿ ನಗರ ಪೊಲೀಸ್ ಠಾಣೆ: ಕ್ರೈಂ ನಂ. 149/2026. ಪ್ರದೀಪ್ ಪೂಜಾರಿ ಸಾವಿಗೆ ಪ್ರಚೋದನೆ ನೀಡಿದ ಆರೋಪದಡಿ ದಿಲೀಪ್ ನೀಡಿದ ದೂರಿನ ಮೇರೆಗೆ ದಾಖಲಾಗಿರುವ ಪ್ರಕರಣ.

ಈ ಮೂರು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವಹಿಸುವ ಮೂಲಕ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿದೆ.

ಪ್ರದೀಪ್ ಪೂಜಾರಿ ಸಾವಿನ ಪ್ರಕರಣದ ತನಿಖೆಯನ್ನು ಸಿಐಡಿ ಅಥವಾ ಸಿಬಿಐಗೆ ವಹಿಸಬೇಕೆಂದು ಕುಟುಂಬಸ್ಥರು ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದರು. ನವೆಂಬರ್ 11ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಮೂರು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿರುವುದು ಗಮನಾರ್ಹವಾಗಿದೆ.

ಇದೀಗ ಪ್ರಕರಣದ ಮುಂದಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಳ್ಳಲಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!