ನ.14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ 73ನೇ ಅಖಿಲ ಭಾರತ ಸಹಕಾರ ಸಪ್ತಾಹ- ಜಯಕರ್ ಶೆಟ್ಟಿ ಇಂದ್ರಾಳಿ

ಜಿಲ್ಲೆಯ ಏಳು ಕಡೆ ವಿವಿಧ ಕಾರ್ಯಕ್ರಮ; ನ.20ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಸಮಾರೋಪ

ಉಡುಪಿ: 73ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನವೆಂಬರ್ 14ರಿಂದ 20ರವರೆಗೆ ಉಡುಪಿ ಜಿಲ್ಲೆಯಾದ್ಯಂತ ಏಳು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಆಶ್ರಯದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಹಕಾರ ಕ್ಷೇತ್ರದ ಬೆಳವಣಿಗೆ, ಆಧುನೀಕರಣ, ಶಿಕ್ಷಣ, ಮಹಿಳೆಯರು ಮತ್ತು ಯುವಜನರ ಪಾಲ್ಗೊಳ್ಳುವಿಕೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದರು.

ನ.14: ಸಹಕಾರ ಸಪ್ತಾಹಕ್ಕೆ ಚಾಲನೆ: ‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ಆಶಯದೊಂದಿಗೆ ನ.14ರಂದು ಸಂತೆಕಟ್ಟೆಯ ಹೋಟೆಲ್ ಬೃಂದಾವನದ ರೂಫ್‌ಟಾಪ್ ಸಭಾಂಗಣದಲ್ಲಿ ಸಪ್ತಾಹ ಉದ್ಘಾಟನೆಯಾಗಲಿದೆ. ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದು, ಕರಾವಳಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಡಾ. ಗಣನಾಥ್ ಶೆಟ್ಟಿ ಎಕ್ಕಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ನ.15: ಗಣಕೀಕರಣಕ್ಕೆ ಒತ್ತು: ‘ಗಣಕೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲೀಕರಣ ಪ್ರಕ್ರಿಯೆಗಳು ಸಹಕಾರಿ ಸಂಘಗಳ ಬೆಳವಣಿಗೆಗೆ ಪೂರಕ’ ಎಂಬ ವಿಷಯದ ಕಾರ್ಯಕ್ರಮ ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಬೆಳಿಗ್ಗೆ 10ಕ್ಕೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಲಿದ್ದಾರೆ. ಖಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರ ಸಂಘಗಳ ನಿವೃತ್ತ ನೌಕರರನ್ನು ಸನ್ಮಾನಿಸಲಾಗುವುದು.

ನ.16: ಸಹಕಾರ ಶಿಕ್ಷಣ ಮತ್ತು ತರಬೇತಿ: ‘ಸಹಕಾರ ಶಿಕ್ಷಣ, ತರಬೇತಿ ಮತ್ತು ಪ್ರಚಾರದ ಮೂಲಕ ಸಹಕಾರ ಸಂಸ್ಥೆಗಳಲ್ಲಿ ಪರಿಣಾಮಕಾರಿ ಬದಲಾವಣೆ’ ಎಂಬ ವಿಷಯದ ಕಾರ್ಯಕ್ರಮ ಕೋಟದ ಬಿ.ಸಿ. ಹೊಳ್ಳ ಸಹಕಾರ ಸಭಾಭವನದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಕೋಟ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಡಾ. ಕೃಷ್ಣ ಕಾಂಚನ್ ಅಧ್ಯಕ್ಷತೆ ವಹಿಸಲಿದ್ದಾರೆ‌.

ನ.17: ಮೌಲ್ಯವರ್ಧನೆ, ಬ್ರ್ಯಾಂಡ್ ನಿರ್ಮಾಣ: ‘ಸಹಕಾರ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಮತ್ತು ಬ್ರ್ಯಾಂಡ್ ನಿರ್ಮಾಣ’ ವಿಷಯದ ಕಾರ್ಯಕ್ರಮ ಬಜಗೋಳಿಯ ಗಣಪತಿ ಸಭಾಭವನದಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ನ.18: ಸಾರ್ವಜನಿಕ-ಖಾಸಗಿ ಸಹಕಾರಿ ಪಾಲುದಾರಿಕೆ: ‘ಸಾರ್ವಜನಿಕ ಮತ್ತು ಖಾಸಗಿ-ಸಹಕಾರಿ ಪಾಲುದಾರಿಕೆ ಬಲಪಡಿಸುವುದು’ ಎಂಬ ವಿಷಯದ ಕಾರ್ಯಕ್ರಮ ಪಡುಬಿದ್ರಿಯ ವೈ. ಲಕ್ಷ್ಮಣ ಸಭಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ನಡೆಯಲಿದೆ. ವಕೀಲ ಸುಧೀರ್ ಮರೋಳಿ ಉದ್ಘಾಟಿಸಲಿದ್ದಾರೆ.

ನ.19: ಮಹಿಳೆಯರು, ಯುವಜನರ ಪಾಲ್ಗೊಳ್ಳುವಿಕೆ: ‘ಮಹಿಳೆಯರು, ಯುವಜನರು ಮತ್ತು ಸಮಾಜದ ದುರ್ಬಲ ವರ್ಗಗಳ ಸಹಕಾರ ಕ್ಷೇತ್ರದಲ್ಲಿನ ಪಾಲ್ಗೊಳ್ಳುವಿಕೆ’ ವಿಷಯದ ಕಾರ್ಯಕ್ರಮ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಲಿ ಉದ್ಘಾಟಿಸಲಿದ್ದಾರೆ.

ನ.20: ಮಂಗಳೂರಿನಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ: ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ಆಶಯದೊಂದಿಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮ ನ.20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವ ವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!