ಪಂಚ ಗ್ಯಾರಂಟಿ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ: ಸಜ್ಜನ್ ಶೆಟ್ಟಿ

ಉಡುಪಿ: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುವ ಬಿಜೆಪಿಗೆ ಜನರ ಮುಂದೆ ಮಾತನಾಡುವ ನೈತಿಕತೆ ಇಲ್ಲ ಎಂದು ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಜ್ಜನ್ ಶೆಟ್ಟಿ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಕೇವಲ ಚುನಾವಣಾ ಘೋಷಣೆಗಳಾಗಿ ಉಳಿಯದೆ, ನೇರವಾಗಿ ಜನರ ಬದುಕಿನಲ್ಲಿ ಬದಲಾವಣೆ ತಂದಿವೆ. ಇಂತಹ ಜನಪರ ಯೋಜನೆಗಳ ಬಗ್ಗೆ ಬಿಜೆಪಿ ನಾಯಕರು ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಆಡಳಿತಾವಧಿಯಲ್ಲಿ ಜನರಿಗೆ ನೀಡಿದ ಕೊಡುಗೆಗಳ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಜ್ಜನ್ ಶೆಟ್ಟಿ ಹೇಳಿದರು.

“ಜನರ ಜೇಬಿಗೆ ಹೊರೆ ಹಾಕುವ ನೀತಿಗಳ ಬಗ್ಗೆ ಮಾತನಾಡದೆ, ಜನರಿಗೆ ನೇರವಾಗಿ ನೆರವಾಗುತ್ತಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿ ಪ್ರಶ್ನೆ ಮಾಡುತ್ತಿದೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ಟೀಕಿಸುವ ಮೊದಲು ಬಿಜೆಪಿ ತನ್ನ ಆಡಳಿತದ ಲೆಕ್ಕವನ್ನು ಜನರ ಮುಂದಿಡಲಿ. ಜನರ ಬದುಕಿಗೆ ಆಸರೆಯಾಗಿರುವ ಯೋಜನೆಗಳನ್ನು ರಾಜಕೀಯ ದ್ವೇಷದಿಂದ ವಿರೋಧಿಸುವುದು ಬಿಜೆಪಿಯ ಹತಾಶೆಯನ್ನು ತೋರಿಸುತ್ತದೆ” ಎಂದು ಅವರು ಹೇಳಿದರು.

ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ನೀಡುವ ಗೃಹಲಕ್ಷ್ಮೀ, ಉಚಿತ ವಿದ್ಯುತ್ ಸೌಲಭ್ಯ ಒದಗಿಸುವ ಗೃಹಜ್ಯೋತಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ, ಯುವಕರಿಗೆ ನೆರವಾಗುವ ಯುವನಿಧಿ ಹಾಗೂ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಸೇರಿದಂತೆ ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ನೆರವಾಗಿವೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ ಮಾತನ್ನು ಉಳಿಸಿಕೊಂಡು ಮುನ್ನಡೆಯುತ್ತಿದೆ. ಆದರೆ ಬಿಜೆಪಿ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಕ್ಕಿಂತ ಗ್ಯಾರಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುವುದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಜನರ ಆಶೀರ್ವಾದ ಕಾಂಗ್ರೆಸ್ ಸರ್ಕಾರದೊಂದಿಗಿದ್ದು, ಮುಂದಿನ ದಿನಗಳಲ್ಲಿಯೂ ಜನಪರ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಸಜ್ಜನ್ ಶೆಟ್ಟಿ ಹೇಳಿದರು.

“ಬಿಜೆಪಿ ನಾಯಕರು ಮೊದಲು ತಮ್ಮ ಆಡಳಿತದ ವೈಫಲ್ಯಗಳನ್ನು ಜನರ ಮುಂದೆ ವಿವರಿಸಲಿ. ಜನರಿಗೆ ನೆರವಾಗುತ್ತಿರುವ ಪಂಚ ಗ್ಯಾರಂಟಿಗಳ ಬಗ್ಗೆ ಮಾತನಾಡುವ ನೈತಿಕತೆಯನ್ನು ನಂತರ ಹುಡುಕಲಿ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ; ಜನರ ಪರವಾಗಿ ನಮ್ಮ ಹೋರಾಟ ನಿರಂತರವಾಗಿರುತ್ತದೆ” ಎಂದು ಸಜ್ಜನ್ ಶೆಟ್ಟಿ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

error: Content is protected !!