ಪಾಕಿಸ್ತಾನದ ಪರ ಘೋಷಣೆ: ಹಿಂದೂ ಕಾರ್ಯಕರ್ತನ ಫೋಟೋ ವೈರಲ್!-ಪೊಲೀಸರಿಗೆ ದೂರು
ಬೆಳ್ತಂಗಡಿ: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶದ ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನದ ಪರ ಘೋಷಣೆ ಕೇಳಿ ಬಂದ ಪ್ರಕರಣಕ್ಕೆ ಸಂಬಂಧಿಸಿ ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದೆ ಎಂದು ಹಿಂದೂ ಕಾರ್ಯಕರ್ತರೋರ್ವರು ಪೊಲೀಸರಿಗೆ ದೂರು ನೀಡಿದ್ದಾರೆ.
ಚುನಾವಣಾ ಫಲಿತಾಂಶದ ವೇಳೆ ವಿಜಯೋತ್ಸವ ನಡೆಸುತ್ತಿದ್ದಾಗ ಎಸ್‌ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವೇಳೆ ಹಿಂದೂ ನಾಯಕನ ಪೋಟೋವೂ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈಗ ಈ ಯುವಕನು ತನ್ನ ಫೋಟೋವನ್ನು ತಪ್ಪಾಗಿ ಬಳಸಲಾಗಿದ್ದು, ಮಾನ ಹಾನಿ ಮಾಡಲಾಗಿದೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದವರು ಹಿಂದೂ ಕಾರ್ಯಕರ್ತರು ಆದರೆ, ಈಗ ಅವರು ಎಸ್‌ಡಿಪಿಐ ಕಾರ್ಯಕರ್ತರ ಮೇಲೆ ಆರೋಪ ಹೊರಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಎಸ್‌ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡೂ ದೂರುಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.