ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ – ಪ್ರತಿಭಟನೆ ಮುಂದುವರೆಯಲಿದೆ: ರೈತ ಮುಖಂಡರು
ನವದೆಹಲಿ: ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ವಿಧಿಸಿರುವುದನ್ನು ಸ್ವಾಗತಿಸಿರುವ ರೈತರ ಮುಖಂಡರು, ಪ್ರತಿಭಟನೆ ಮುಂದುವರೆಸುವುದಾಗಿ ಮಂಗಳವಾರ ಹೇಳಿದ್ದಾರೆ.
ಕೃಷಿ ಕಾನೂನುಗಳ ಜಾರಿಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಆದೇಶವನ್ನು ನಾವು ಸ್ವಾಗತಿಸುತ್ತೇವೆ, ಆದರೆ ಈ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆ” ಎಂದು 40 ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ಮುಖಂಡ ಅಭಿಮನ್ಯು ಕೊಹಾರ್ ಅವರು ಹೇಳಿದ್ದಾರೆ.
ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಮತ್ತೊಬ್ಬ ರೈತ ಮುಖಂಡ ಹರಿಂದರ್ ಲೋಖ್ವಾಲ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲು ಸಂಯುಕ್ತ ಕಿಸಾನ್ ಮೋರ್ಚಾ ಸಭೆ ಕರೆದಿದೆ.
ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಳೆದ 48 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಇಂದು ಕೊನೆಗೂ ಸಿಹಿ ಸುದ್ದಿ ಸಿಕ್ಕಿದ್ದು, ವಿವಾದಿತ ಮೂರು ಕಾಯ್ದೆಗಳಿಗೆ ತಡೆ ನೀಡಿರುವ ಸುಪ್ರೀಂಕೋರ್ಟ್, ಸಮಸ್ಯೆ ಬಗೆಹರಿಕೆಗೆ ಸಮಿತಿಯೊಂದನ್ನು ರಚನೆ ಮಾಡಿದೆ.