ನೂತನ ಸಚಿವರ ಪಟ್ಟಿ ಪ್ರಕಟಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ರಾಜ್ಯದ ಸಂಪುಟ ವಿಸ್ತರಣೆ ಕುರಿತ ಕುತೂಹಲಕ್ಕೆ ಕೊನೆಗೂ ಇಂದು ತೆರೆಬೀಳಲಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಸಂಪುಟ ಸೇರಲಿರುವವರ ಪಟ್ಟಿ ಸಿದ್ದವಾಗಿದ್ದು, ಇಂದು ಸಂಜೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಈ ಪದಗ್ರಹಣ ಕಾರ್ಯಕ್ರಮದಲ್ಲಿ 7 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಜೆಪಿ ಸರ್ಕಾರ ರಚನೆಗೆ ಸಹಾಯವಾಗಿದ್ದ ವಿಧಾನ ಪರಿಷತ್ ಸದಸ್ಯರಾದ ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಸೇರಿದಂತೆ ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ, ಹುಕ್ಕೇರಿ ಶಾಸಕ ಉಮೇಶ್ ಕತ್ತಿ, ಬಿಳಗಿ ಶಾಸಕ ಮುರುಗೇಶ್ ನಿರಾಣಿ, ಸುಳ್ಯ ಶಾಸಕ ಎಸ್.ಅಂಗಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಅಬಕಾರಿ ಸಚಿವ ಎಚ್. ನಾಗೇಶ್ ಅವರನ್ನು ಸಂಪುಟದಿಂದ ಕೈ ಬಿಡಲಾಗಿದ್ದು, ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರಿಗೂ ಈ ಬಾರಿ ಅವಕಾಶ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿ, ಅಬಕಾರಿ ಸಚಿವ ಎಚ್. ನಾಗೇಶ್ ಅವರನ್ನು ಸಂಪುಟ ದಿಂದ ಕೈ ಬಿಡಲು ನಿರ್ಧರಿಸಲಾಗಿದೆ ಆದರೆ ಇಂದು ಅವರ ರಾಜೀನಾಮೆ ಪಡೆಯುವುದಿಲ್ಲ. ಅವರ ಮನವೊಲಿಸುವ ಪ್ರಯತ್ನ ಮಾಡಿ ನಾಳೆ ರಾಜೀನಾಮೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.