ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: 7 ನೂತನ ಸಚಿವರಿಂದ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ಭಾರೀ ಅಸಮಾಧಾನ ಮತ್ತು ಆಕ್ರೋಶದ ನಡುವೆ ರಾಜಭವನ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಅಧಿಕಾರಪದ ಹಾಗೂ ಗೋಪ್ಯತೆ ಪ್ರಮಾಣವಚನ ಬೋಧಿಸಿದರು.
ಅಭಿಮಾನಿಗಳ ಹರ್ಷೋದ್ಗಾರಗಳ ನಡುವೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನ ಪರಿಷತ್ತಿನ ಸದಸ್ಯರಾದ ಎಂ.ಟಿ.ಬಿ. ನಾಗರಾಜ್, ಸಿ. ಪಿ.ಯೋಗೇಶ್ವರ್ ಹಾಗೂ ಆರ್. ಶಂಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನ ಸಭಾಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಹಾಗೂ 8 ಬಾರಿಶಾಸಕರಾಗಿರುವ ಹುಕ್ಕೇರಿ ವಿಧಾನ ಕ್ಷೇತ್ರದ ಶಾಸಕ ಉಮೇಶ್ ಕತ್ತಿ ಅವರು ದೇವರು ಹಾಗೂ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್. ಅಂಗಾರ ಅವರು ಮೊದಲ ಬಾರಿಗೆ ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಬೆಂಗಳೂರಿನ ಮಹದೇವಪುರ ಕ್ಷೇತ್ರ ಶಾಸಕ ಅರವಿಂದ ಲಿಂಬಾವಳಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.