ಉಡುಪಿ: ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದು ಮಾಡುವುದಿಲ್ಲ ಸುರೇಶ್
ಉಡುಪಿ: ಕೋವಿಡ್ ಸಂದಿಗ್ಧ ಸನ್ನಿವೇಶದಲ್ಲಿ ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದು ಮಾಡುವುದಿಲ್ಲ. ಬದಲಾಗಿ ಮಕ್ಕಳ ಸುರಕ್ಷತೆ ಮತ್ತು ಮಕ್ಕಳ ಆತ್ಮವಿಶ್ವಾಸದ ಕುರಿತು ಗಮನಹರಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸುತ್ತೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮಂಗಳವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಚಿವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪರೀಕ್ಷಾ ಪೂರ್ವ ಸಿದ್ಧತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಕೂಡ ಪರೀಕ್ಷೆ ನಡೆಸಲು ಸೂಚನೆ ನೀಡಿದೆ. ಜೊತೆಗೆ ಕೆಲವು ಸೂಚನೆಗಳನ್ನು ನೀಡಿದೆ. ಅದನ್ನು ಪಾಲಿಸಿಕೊಂಡು ಪರೀಕ್ಷೆಯನ್ನು ನಡೆಸಲಾಗುತ್ತದೆ. ಕಂಟೆಂಟ್ ವಲಯದಲ್ಲಿರುವರಿಗೆ ಈಗ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದರೆ ಮುಂದಿನ ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ವಿಶೇಷ ಪರಿಸ್ಥಿತಿಯಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಾಮಾನ್ಯ ದಿನಗಳಂತೆ ಒಂದು ಕೊಠಡಿಯಲ್ಲಿ 24ರ ಬದಲು 18 ಮಕ್ಕಳನ್ನು ಕೂರಿಸಲಾಗುತ್ತದೆ. ಪ್ರತಿ ಮಗು ಮತ್ತು ಪ್ರತೀ ಡೆಸ್ಕ್ ನಡುವೆ 3.5 ಅಡಿ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗುತ್ತದೆ. ಎಲ್ಲಾ ಮಕ್ಕಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ಮಗುವಿಗೆ ಎರಡು ಮಾಸ್ಕ್ ಕೊಡುವ ವ್ಯವಸ್ಥೆ ಆಗಿದೆ. ಅಲ್ಲದೆ ಮಕ್ಕಳ ಕೈಗೆ ಸ್ಯಾನಿಟೈಸರ್ ಹಾಕಲು ಹಾಗೂ ಎಲ್ಲ ಮಕ್ಕಳಿಗೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಪ್ರತಿ 200 ಮಕ್ಕಳಿಗೆ ಒಂದು ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗುತ್ತಿದೆ. ಮಕ್ಕಳು ಕುಡಿಯುವ ನೀರನ್ನು ಮನೆಯಿಂದಲೇ ತರಬೇಕು ಎಂದು ಸೂಚನೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಮಕ್ಕಳ ಪರೀಕ್ಷಾ ಕೇಂದ್ರಕ್ಕೆ ಕರೆತರಲು ಅಗತ್ಯ ಸಾರಿಗೆ ವ್ಯವಸ್ಥೆ ಮಾಡಲು ಹೈಕೋರ್ಟ್ ಸೂಚನೆ ಕೊಟ್ಟಿದೆ. ರಾಜ್ಯ ಸಾರಿಗೆ ಸಚಿವರೊಂದಿಗೆ ಸಭೆ ನಡೆಸಲಾಗಿದೆ. ಸಾರಿಗೆ ವ್ಯವಸ್ಥೆಗಾಗಿ ಮಕ್ಕಳ ಸಮೀಕ್ಷೆ ನಡೆಸಲಾಗುತ್ತಿದೆ. ರೂಟ್ ಮ್ಯಾಪ್ ಕೂಡ ತಯಾರಿ ಮಾಡಲಾಗುತ್ತಿದೆ ಎಂದು ತಿಳಿಸಿದ ಸಚಿವ ಸುರೇಶ್ ಕುಮಾರ್, ಮಕ್ಕಳಲ್ಲಿ ಯಾವುದೇ ಗೊಂದಲಗಳ ಇರಬಾರದು. ಮಕ್ಕಳು ಪರೀಕ್ಷೆಗೆ ತಯಾರಾಗುತ್ತಿದ್ದು, ಅದರತ್ತ ಮಾತ್ರ ಗಮನಹರಿಸುವಂತಾಗಬೇಕು ಎಂದು ಹೇಳಿದರುರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಪೈಕಿ ಈಗಾಗಲೇ 28 ಜಿಲ್ಲೆಗಳಿಗೆ ಭೇಟಿ ನೀಡಿ, ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಸಲು ನಡೆಸಿದ ಸಿದ್ಧತೆಯನ್ನು ಪರಿಶೀಲನೆ ನಡೆಸಿದ್ದೇನೆ. ಆಯಾ ಜಿಲ್ಲೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಸಂವಾದವನ್ನು ನಡೆಸಿ, ಹೈಕೋರ್ಟ್ ಸೂಚನೆಯಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಸಭೆಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ. ರಘುಪತಿ ಭಟ್, ಬಿ.ಎಂ.ಸುಕುಮಾರ್ ಶೆಟ್ಟಿ, ಲಾಲಾಜಿ ಆರ್. ಮೆಂಡನ್, ಹಾಲಾಡಿ ಶ್ರೀನಿವಾಸ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ.ಜಗದೀಶ, ಎಸ್ ಪಿ ವಿಷ್ಣುವರ್ಧನ್, ಮೂರು ಜಿಲ್ಲೆಗಳ ಜಿ.ಪಂ. ಸಿಇಒಗಳಾದ ಪ್ರೀತಿ , ಡಾ. ಸೆಲ್ವಮಣಿ, ರೋಶನ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶೇಷಶಯನ ಕಾರಿಂಜ, ಹರೀಶ್ ಗಾಂವರ್, ಮಲ್ಲೇಸ್ವಾಮಿ ಸಹಿತ ಮೂರು ಜಿಲ್ಲೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.