ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ- ಅನರ್ಹ ಕಾರ್ಡ್ ಪತ್ತೆ ಹಚ್ಚಿ ಕ್ರಿಮಿನಲ್ ಮೊಕದ್ದಮೆ: ಡಿಸಿ
ಉಡುಪಿ: ಬಿಪಿಎಲ್ ಕಾರ್ಡಿಗೆ ಅರ್ಜಿ ಸಲ್ಲಿಸುವ ಕಾರ್ಯ ಪುನರ್ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರಿಗೆ ಹೊಸದಾಗಿ ಆದ್ಯತಾ ಪಡಿತರ ಚೀಟಿ ಹೊಂದಲು ಅವಕಾಶ ಕಲ್ಪಿಸಲಾಗಿದೆ.
ಈ ಕೆಳಕಂಡ ಮಾನದಂಡಗಳನ್ನು ಹೊಂದಿರುವವರು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ:
ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ ನಿಗಮಗಳು/ ಸ್ವಾಯತ ಸಂಸ್ಥೆಗಳು ಇತ್ಯಾದಿ ಒಳಗೊಂಡ0ತೆ ಆದಾಯ ತೆರಿಗೆ / ಸೇವಾ ತೆರಿಗೆ / ವ್ಯಾಟ್/ ವೃತ್ತಿ ತೆರಿಗೆ
ಪಾವತಿಸುವ ಎಲ್ಲಾ ಕುಟುಂಬಗಳು, ಗ್ರಾಮೀಣ ಭಾಗದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾö್ಯಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಗಳಿಗಿಂತಲೂ ಹೆಚ್ಚು ಇರುವ
ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನರ್ಹರ ಪಡಿತರ ಚೀಟಿ ರದ್ದು: ಅನ್ನಬಾಗ್ಯ ಯೋಜನೆಯಡಿ ದುರ್ಬಲ ಕುಟುಂಬಗಳಿಗೆ ನೀಡುವ ಆದ್ಯತಾ (ಬಿಪಿಎಲ್) ಕಾರ್ಡ್ನ್ನು ಆರ್ಥಿಕವಾಗಿ ಸದೃಢವಾದ ಕೆಲವು ಕುಟುಂಬಗಳು ಬಿಪಿಎಲ್ ಕಾರ್ಡ್ ಮಾನದಂಡವನ್ನು ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ಆದ್ಯತಾ (ಬಿಪಿಎಲ್) ಕಾರ್ಡ್ ಪಡೆದುಕೊಂಡಿರುವುದು ಕಂಡು ಬಂದಿದ್ದು, ಅಂತಹ ಅನರ್ಹರು ಪಡೆದಿರುವ ಕಾರ್ಡನ್ನು ಪತ್ತೆ ಹಚ್ಚಿ ರದ್ದುಪಡಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಹೊಂದಿರುವ ಕಾರ್ಡ್ನ್ನು ಕೂಡಲೇ ಹಿಂದಿರುಗಿಸದಿದ್ದಲ್ಲಿ ಅಂತಹ ಅನರ್ಹ ಕಾರ್ಡುಗಳನ್ನು ಪತ್ತೆ ಹಚ್ಚಿ ರದ್ದುಪಡಿಸಿ, ಅಂತಹವರ ವಿರುದ್ಧ ಅಗತ್ಯ ಕ್ರಮ ಜರುಗಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.