ಲಂಚ ಸ್ವೀಕರಿಸಿದ ಪ್ರಕರಣ: ಹೆಡ್ ಕಾನ್ಸ್ಟೇಬಲ್ ಗೆ ಮೂರು ವರ್ಷ ಜೈಲು ಶಿಕ್ಷೆ

ಬೆಳ್ತಂಗಡಿ: ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಒಬ್ಬರಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಪ್ರಕಾಶ್ ಎಸ್ ಶಿಕ್ಷೆಗೆ ಒಳಗಾದ ವ್ಯಕ್ತಿ. 2011ರ ಜುಲೈ 7ರಂದು ಬೆಳ್ತಂಗಡಿಯಲ್ಲಿ ಪ್ರಕರಣವೊಂದರ ಪಿರ್ಯಾದಿ ಫಾರೂಕ್ ಎಂಬವರಿಂದ ಎಫ್. ಐ. ಆರ್. ದಾಖಲಿಸಲು,  1,000ರೂ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ವಿಚಾರವಾಗಿ  ಹಣ ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ದಿಲೀಪ್ ಕುಮಾರ್ ಮತ್ತು ಸಿಬ್ಬಂದಿ ದಾಳಿ ಮಾಡಿ ಈತನನ್ನು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಮಂಡಿಸಿದ್ದರು. ಆರೋಪಿಯ ಮೇಲಿನ ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನಲೆ ಆರೋಪಿಗೆ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದ್ದು,  ಮೂರು ವರ್ಷ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದ್ದಾರೆ. ಆರೋಪಿ ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಸಾದಾ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!