ಉಡುಪಿ, ದ.ಕ. 2 ದಿನ ‘ಆರೆಂಜ್ ಅಲರ್ಟ್’ ಎಚ್ಚರಿಕೆ
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಇದೇ 14 ಮತ್ತು 15ರಂದು ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎರಡೂ ದಿನಗಳು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 45ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.
ಜೂನ್ 15ರ ನಂತರ ಕರಾವಳಿಯಲ್ಲಿ ಮಳೆ ಪ್ರಮಾಣ ಕೊಂಚ ತಗ್ಗಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.